ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ವು 600 ಹೆಚ್ಚುವರಿ ಬಸ್ ಸೇವೆಗಳನ್ನು ಕಲ್ಪಿಸಿದೆ.
ಈ ಹೆಚ್ಚುವರಿ ಬಸ್ಗಳು ಏ. 5 ಮತ್ತು 6ರಂದು ನಗರದಿಂದ ರಾಜ್ಯ ಹಾಗೂ ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಹೊರಡುವ ಹಾಗೂ ಏ. 7ರಂದು ವಿವಿಧೆಡೆಯಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಾರ್ಯಾಚರಣೆ ಮಾಡಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.
ಅದೇ ರೀತಿ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.
ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಇ-ಟಿಕೆಟ್ ಬುಕಿಂಗ್ಗೆ ವೆಬ್ಸೈಟ್:
www.ksrtc.in ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್ ಕೌಂಟರ್ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಜತೆಗೆ ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ, ಹೋಗಿ ಬರುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.