ಹೈದರಾಬಾದ್: ಸಂಸದ ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದ ಜೆಡಿಎಸ್ ಜತೆಗೆ ಚುನಾವಣಾ ಮೈತ್ರಿಗೆ ಇಂಗಿತ ವ್ಯಕ್ತಪಡಿಸಿದೆ. ಈ ಬಗ್ಗೆ ಖುದ್ದು ಸಂಸದ ಅಸಾದುದ್ದೀನ್ ಒವೈಸಿ ಅವರೇ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ.
ನಮ್ಮ ಪಕ್ಷ ಇದುವರೆಗೆ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜೆಡಿಎಸ್ ಜತೆಗೆ ಮೈತ್ರಿ ಮಾಡಲು ನಾವು ಸಿದ್ಧರಿದ್ದೇವೆ. ಈ ಬಗ್ಗೆ ಕರ್ನಾಟಕದಲ್ಲಿರುವ ನಮ್ಮ ಪಕ್ಷದ ಅಧ್ಯಕ್ಷರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಇತರ ಮುಖಂಡರ ಜತೆಗೆ ಮಾತುಕತೆ ನಡೆಸುತ್ತಿದ್ದಾರೆ. ಸೂಕ್ತ ಸ್ಪಂದನೆ ಇದುವರೆಗೆ ವ್ಯಕ್ತವಾಗಿಲ್ಲ. ಒಂದು ವೇಳೆ ಮೈತ್ರಿ ಸಾಧ್ಯವಾಗದದಿದ್ದರೆ, ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ಅಸಾದುದ್ದೀನ್ ಒವೈಸಿ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮುಖಂಡರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಅವರು ನಮ್ಮ ಪಕ್ಷದ ಜತೆಗೆ ಮೈತ್ರಿ ಮಾಡುವುದು ಅಸಾಧ್ಯ. ಮುಂದೆ ನೋಡೋಣ ಎಂದಷ್ಟೇ ಹೇಳಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಪಕ್ಷ ಜೆಡಿಎಸ್‌ಗೆ ಬೆಂಬಲ ಘೋಷಿಸಿತ್ತು. ಆದರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.
ಅಕ್ರಮ: ಮುಸ್ಲಿಂ ಸಮುದಾಯಕ್ಕೆ ಕರ್ನಾಟಕದಲ್ಲಿ ಇದ್ದ ಶೇ.4 ಮೀಸಲು ರದ್ದು ಮಾಡಿರುವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಿರ್ಧಾರ ಅಕ್ರಮ. ಅದರ ವಿರುದ್ಧ ಪ್ರತಿಭಟನೆ ನಡೆಸದೆ ಯಾಕೆ ಎಲ್ಲರೂ ಮೌನವಾಗಿದ್ದಾರೆ ಎಂದು ಒವೈಸಿ ಪ್ರಶ್ನಿಸಿದರು.