Advertisement

Kukke Subhramanya: ಚಂಪಾಷಷ್ಠಿ ಜಾತ್ರೋತ್ಸವ ಸಂಪನ್ನ, ನೀರಿನಲ್ಲಿ ಬಂಡಿ ಉತ್ಸವ

03:21 AM Dec 13, 2024 | Team Udayavani |

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು.

Advertisement

ಮುಂಜಾನೆ ಶ್ರೀ ದೇಗುಲದ ಪ್ರಧಾನ ಅರ್ಚಕ ವೇ| ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮು ಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.

ಎಲ್ಲ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು. ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ಕೊಪ್ಪರಿಗೆ ಅನ್ನದ ಭೋಜನ ಪ್ರಸಾದ ಸ್ವೀಕರಿಸಿದರು.

ಉತ್ಸವದ ನಿಮಿತ್ತ ದೇಗುಲದ ಹೊರಾಂಗಣದ ಸುತ್ತಲೂ ನೀರನ್ನು ಮಧ್ಯಾಹ್ನದ ಬಳಿಕ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಬಳಿಕ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇಗುಲದಲ್ಲಿ ಕಾಣಸಿಗದು. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು.

ಪುಟಾಣಿಗಳೊಂದಿಗೆ ನೀರಾಡಿದ ಯಶಸ್ವಿ
ದೇಗುಲದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷಪಟ್ಟಿತು. ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ ನೀರಾಟವಾಡಿತು.

Advertisement

ಅಲ್ಲದೆ ನೀರಿನಲ್ಲಿ ಪುಟಾಣಿ ಮಕ್ಕಳು ಒದ್ದೆಯಾಗಿ ಆಟವಾಡುತ್ತಿದ್ದರು. ಜಾತ್ರೆಯ ಅವಧಿಯಲ್ಲಿ ದೇಗುಲದ ವಿಶೇಷ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ನಡೆಯುವುದಿಲ್ಲ. ಡಿ.13ರಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next