Advertisement

ದಸರೆಗೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ

12:04 PM Sep 22, 2018 | Team Udayavani |

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುತ್ತವೆ ಇದರಿಂದ ಸರ್ಕಾರಕ್ಕೆ ಧಕ್ಕೆಯಾಗುವುದಿಲ್ಲ. ರಾಜ್ಯದಲ್ಲಿ ರಾಜಕೀಯ ಗೊಂದಲಗಳೆಲ್ಲ ಮುಗಿದು ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಲಿ ಎಂದು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥಿಸುವುದಾಗಿ ಹೇಳಿದರು.

ಅ.10ರಂದು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಉದ್ಘಾಟನೆ ಮಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ ಎಂದರು.

ಅಭಿವೃದ್ಧಿಗೆ ಒತ್ತು: ಈ ಬಾರಿಯ ದಸರಾ ಮಹೋತ್ಸವಕ್ಕೆ 25 ಕೋಟಿ ಅನುದಾನ ಕೇಳಲಾಗಿದೆ. ಜೊತೆಗೆ ದಸರಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ರಸ್ತೆ, ಕಟ್ಟಡಗಳ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಗೆ 216 ಕೋಟಿ, ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಗೆ 10 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಉಪ ಸಮಿತಿ ರಚನೆ: ದಸರಾ ಉಪ ಸಮಿತಿಗಳಿಗೆ ಜನ ಪ್ರತಿನಿಧಿಗಳನ್ನು ಸೇರಿಸುವ ಸಂಬಂಧ ಪ್ರಕ್ರಿಯೆ ನಡೆದಿದ್ದು, 25ರೊಳಗೆ ಉಪ ಸಮಿತಿಗಳಿಗೆ ಜನಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು ಎಂದರು.

Advertisement

ರಾಜ ಮನೆತನದವರಿಗೆ ಆಹ್ವಾನ: ರಾಜ ಮನೆತನದವರಿಗೆ ದಸರಾ ಮಹೋತ್ಸವಕ್ಕೆ ಆಹ್ವಾನ ನೀಡಲು ಅವರ ದಿನಾಂಕ, ಸಮಯ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದು, ಸದ್ಯದಲ್ಲೇ ಆಹ್ವಾನ ನೀಡಲಾಗುವುದು ಎಂದು ಹೇಳಿದರು.

ಚರ್ಚೆ ಆಗಿಲ್ಲ: ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಆಯ್ಕೆ ಸಂಬಂಧ ಇನ್ನು ಚರ್ಚೆಗಳು ನಡೆದಿಲ್ಲ. ಮೈತ್ರಿ ಸರ್ಕಾರ ಆಗಿರುವುದರಿಂದ ಎರಡೂ ಪಕ್ಷಗಳ ನಾಯಕರು ಕುಳಿತು ಮಾತನಾಡಬೇಕಿರುವುದರಿಂದ ಮೇಯರ್‌ ಚುನಾವಣೆ ವಿಳಂಬವಾಗಬಹುದು ಎಂದು ತಿಳಿಸಿದರು.

ಸ್ಪಷ್ಟನೆ ನೀಡಿರುವ ಸಿಎಂ: ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿಯಿಂದ ಸಾಕಷ್ಟು ಹಾನಿ ಸಂಭವಿಸಿದ್ದರೆ, ಮತ್ತೂಂದೆಡೆ ಮಳೆಯೇ ಇಲ್ಲದೆ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಚಟುವಟಿಕೆಗಳಿಂದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತದೆ. ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಜನತೆ ದಂಗೆ ಏಳುತ್ತಾರೆ ಎಂಬ ಅರ್ಥದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಆ ರೀತಿ ಹೇಳಿಕೆ ನೀಡಿರಬಹುದು. ತಮ್ಮ ಹೇಳಿಕೆ ಬಗ್ಗೆ ಮುಖ್ಯಮಂತ್ರಿಯವರೇ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಕರೆಯಲಾಗುತ್ತಾ: ನೀವೂ ಬಿಜೆಪಿ ಶಾಸಕರ ಸಂಪರ್ಕದಲ್ಲಿದ್ದೀರಾ ಎಂಬ ಪ್ರಶ್ನೆಗೆ ಬಿಜೆಪಿ ಶಾಸಕರಾದ ಎಸ್‌.ಎ.ರಾಮದಾಸ್‌, ನಾಗೇಂದ್ರ, ಹರ್ಷವರ್ಧನ್‌ ನನ್ನ ಜೊತೆಯಲ್ಲೇ ಇದ್ದಾರಲ್ಲಾ ಎಂದು ಹಾಸ್ಯ ಚಟಾಕಿ ಹಾರಿಸಿದ ಸಚಿವರು, ಹಾಗೆಂದು ಅವರನ್ನು ಪಕ್ಷ ಬಿಟ್ಟು ಬನ್ನಿ ಎಂದು ಕರೆಯಲಾಗುತ್ತಾ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next