ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ತಮ್ಮ ತಂದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಶ್ವಾಸಮತ ಯಾಚನೆ. ಸಂಪುಟ ರಚನೆ, ಸಮನ್ವಯ ಸಮಿತಿ ರಚನೆ ಸೇರಿದಂತೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರಲ್ಲದೆ, ಈ ವಿಚಾರದಲ್ಲಿ ಸಲಹೆಗಳನ್ನೂ ಪಡೆದರು ಎಂದು ತಿಳಿದುಬಂದಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿಯಾದ ಮೇಲೆ ತಂದೆಯನ್ನು ಮೊದಲ ಬಾರಿ ಭೇಟಿಯಾಗಿದ್ದೇನೆ. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ರಾಜಕೀಯ ವಿದ್ಯಾಮಾನಗಳ ಬಗ್ಗೆ ಅವರು ಮಾತನಾಡಿದ್ದಾರೆ.
ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು, ಜನರ ಹಿತಾಸಕ್ತಿ ಕಾಪಾಡುವುದು, ಸುಭದ್ರ ಸರ್ಕಾರ ನೀಡುವುದರ ಬಗ್ಗೆ ಸಲಹೆ ನೀಡಿದ್ದಾರೆ ಎಂದರು.
ಬಿಜೆಪಿ ವಿರುದ್ಧ ಕಿಡಿ: ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿ ಕಾರಿದ ಮುಖ್ಯಮಂತ್ರಿಗಳು, ಬಿಜೆಪಿ ನಾಯಕರು ಇನ್ನೂ ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನಾವು ಸರ್ಕಾರ ರಚಿಸಿ ಆಗಿದೆ. ಶುಕ್ರವಾರ ಬಹುಮತವನ್ನೂ ಸಾಬೀತುಪಡಿಸುತ್ತೇವೆ. ಇನ್ನಾದರೂ ಅವರು ಅನಗತ್ಯ ಟೀಕೆಗಳನ್ನು ಬಿಟ್ಟು ರಾಜ್ಯಾಡಳಿತ ನಡೆಸಲು ಸಹಕಾರ, ಸಲಹೆಗಳನ್ನು ನೀಡಲಿ. ಅಭಿವೃದ್ಧಿ ದೃಷ್ಟಿಯಿಂದ ಅವರು ನೀಡುವ ಯಾವುದೇ ಸಲಹೆಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದರು.
ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದೇ ಮುಖ್ಯಮಂತ್ರಿಯಾಗಿ ನನ್ನ ಮೊದಲ ಆದ್ಯತೆ. ಈ ಕುರಿತು ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಕಾಂಗ್ರೆಸ್ ಮುಖಂಡರ ಜತೆ ಚರ್ಚೆಸಿ ಶೀಘ್ರವೇ ಘೋಷಣೆ ಮಾಡಲಾಗುವುದು.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ