ಕುಮಟಾ: ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕರೆ ನೀಡಿದ ಕಾರವಾರ ಬಂದ್ ಸೋಮವಾರ ಯಶಸ್ವಿಯಾಗಿದ್ದು, ಏತನ್ಮಧ್ಯೆ ಕುಮಟಾದಲ್ಲಿ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಕುಮಟಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ಸಂದರ್ಭದಲ್ಲಿ ಕುಮಟಾ ಪ್ರತಿಭಟನೆಯ ನಿಯಂತ್ರಣ ವ್ಯವಸ್ಥೆ ಪರಿಶೀಲನೆಯಲ್ಲಿದ್ದ ಐಜಿಪಿ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದರು, ಘಟನೆಯಲ್ಲಿ ನಿಂಬಾಳ್ಕರ್ ವಾಹನದ ಚಾಲಕ ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದೆ. ಪ್ರತಿಭಟನಾಕಾರರು ಪೊಲೀಸ್ ಪಡೆಯ ಮೇಲೆ ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ.
ಕುಮಟಾ ಪಟ್ಟಣದಲ್ಲಿ ಸೆಕ್ಷನ್ ಜಾರಿ:
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಉತ್ತರಕನ್ನಡ ಜಿಲ್ಲೆ ಕುಮಟಾದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ.