Advertisement

KVG ಶಿಕ್ಷಣ ಸಂಸ್ಥೆಗಳ ಎ.ಎಸ್‌. ರಾಮಕೃಷ್ಣ ಕೊಲೆ ಪ್ರಕರಣ- ಸಹೋದರ ಸೇರಿ 6 ಮಂದಿ ದೋಷಿ

12:07 AM Sep 28, 2023 | Team Udayavani |

ಬೆಂಗಳೂರು: ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದ 6 ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

Advertisement

ಪ್ರಕರಣದಲ್ಲಿ ಹತ್ಯೆಗೀಡಾದ ಎ.ಎಸ್‌. ರಾಮಕೃಷ್ಣ ಅವರ ಸಹೋದರ ಡಾ| ರೇಣುಕಾಪ್ರಸಾದ್‌ ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರದ ಪರವಾಗಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಅ. 5ರಂದು ವಿಚಾರಣೆ
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ| ರೇಣುಕಾ ಪ್ರಸಾದ್‌, ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ, ಶರಣ್‌ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ.ಎಸ್‌. ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ನ್ಯಾಯಾಲಯ ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್‌.ಯು. ನಾಗೇಶ್‌ ಕುಮಾರ್‌ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಇದೇ ವೇಳೆ ಎತ್ತಿ ಹಿಡಿದಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅ. 5ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಇದೇ ವೇಳೆ ಹೇಳಿದೆ.

ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬೆರಲ್‌ ಎಜುಕೇಷನ್‌ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ವಯಸ್ಸಾದ ಮತ್ತು ಅನಾರೋಗ್ಯದ ಕಾರಣ ಶಿಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ.ವಿ. ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್‌ ಅವರಿಗೆ ವಿಭಜನೆ ಮಾಡಿ ಕೊಡಲಾಗಿತ್ತು. ಆದರೆ, ಮತ್ತೋರ್ವ ಪುತ್ರ ಎ.ಎಸ್‌. ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆಸ್ತಿ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ. 2009ರಲ್ಲಿ ಚಿದಾನಂದ ಅವರ ಪರ ಕೆವಿಜಿ ಮೆಡಿಕಲ್‌ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ಅವರು ನೋಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದ ರೇಣುಕಾ ಪ್ರಸಾದ್‌, ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next