ಚಿಕ್ಕಮಗಳೂರು: ನೆರೆಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ಜಿಲ್ಲೆ ನರಸಿಂಹ ರಾಜಪುರ ತಾಲೂಕಿನ ಮಡಬೂರು ಗ್ರಾಮದ ಮೂರು ಜನ ತೋಟದ ಕಾರ್ಮಿಕರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ.
ಅಸ್ಸಾಂ ರಾಜ್ಯದ ಮೂಲದವರಾದ ಈ ಮೂವರು ಇಲ್ಲಿಗೆ ತೋಟದ ಕೆಲಸಕ್ಕೆ ಬಂದಿದ್ದರು.ಈ ಮೂವರಿಗೆ ಮಂಗನ ಕಾಯಿಲೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ.
ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿತ್ತು. ಸಿಬ್ಬಂದಿಗಳು ಹಾಗೂ ಸುಭಾಷ್ ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ ಮುಂಜಾಗ್ರತ ಕ್ರಮಕೈಗೊಂಡಿದೆ.
ಮಂಗನಕಾಯಿಲೆ ಹರಡಿದ ಸ್ಥಳ “ಹಾಟ್ ಸ್ಪಾಟ್” ಎಂದು ಪರಿಗಣಿಸಿದ್ದು ಸುತ್ತಮುತ್ತಲ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ 6 ರಿಂದ 65 ವರ್ಷದ ವಯೋಮಾನದವರಿಗೆ ಮಂಗನ ಕಾಯಿಲೆ ನಿರೋಧಕ ಲಸಿಕೆ ನೀಡಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಭು ಅವರು, ಜಿಲ್ಲೆಯ ಎನ್ ಆರ್ ಪುರ ತಾಲೂಕಿಗೆ ಹೊರ ರಾಜ್ಯದಿಂದ ಬಂದ ಕಾರ್ಮಿಕರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು ಸೋಕು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಲಾಗಿದೆ ಎಂದಿದ್ದಾರೆ.