Advertisement

ಶೀಘ್ರವೇ ಹುಬ್ಬಳ್ಳಿಯಲ್ಲಿ ಪ್ರಯೋಗಾಲಯ

01:36 PM Mar 22, 2020 | Suhan S |

ಧಾರವಾಡ: ಕೋವಿಡ್ 19 ವೈರಸ್‌ ಪತ್ತೆ ಹಚ್ಚಲು ಗಂಟಲು ದ್ರವ ಹಾಗೂ ರಕ್ತದ ಮಾದರಿ ಪರೀಕ್ಷೆಗಾಗಿ ಪ್ರಯೋಗಾಲಯವನ್ನು ಆದಷ್ಟು ಬೇಗ ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ಡಿಸಿ ಕಚೇರಿಯ ನೂತನ ಸಭಾಂಗಣದಲ್ಲಿ ಕೋವಿಡ್ 19 ವೈರಸ್‌ ನಿಯಂತ್ರಣ ಕಾರ್ಯಕ್ರಮಗಳ ಕುರಿತು ಶನಿವಾರ ನಡೆದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಮೊದಲು ವೈರಸ್‌ ಪತ್ತೆಗಾಗಿ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಬೇಕಾಗಿತ್ತು. ಸದ್ಯ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಇದರಿಂದ ವರದಿ ಪಡೆಯಲು ವಿಳಂಬ ಆಗುತ್ತಿರುವ ಕಾರಣ ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲೂ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದರು.

ಕೋವಿಡ್ 19 ವೈರಸ್‌ ಹರಡದಂತೆ ತಡೆಯುವಲ್ಲಿ ಸರ್ಕಾರ, ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಜನರು ಶುಚಿತ್ವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯಕ್ಕೆ ಒತ್ತು ನೀಡಬೇಕು. ಜಿಲ್ಲಾಡಳಿತದ ಎಲ್ಲ ಅ ಧಿಕಾರಿಗಳು ಆಡಳಿತದ ಇತರ ವಿಷಯಗಳನ್ನು ತಾತ್ಕಾಲಿಕವಾಗಿ ಬದಿಗಿಟ್ಟು ವೈರಾಣು ನಿರ್ಮೂಲನೆಗೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ರೈಲು, ವಿಮಾನ ನಿಲ್ದಾಣಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಾರ್ಯ ಬಿಗಿಯಾಗಬೇಕು. ವದಂತಿಗಳ ನಿಯಂತ್ರಣಕ್ಕೆ ಪ್ರಯತ್ನಗಳಾಗಬೇಕು. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಪೊಲೀಸ್‌ ಹಾಗೂ ಮಾಧ್ಯಮಗಳ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಶಕ್ತಿ ಮೀರಿ ಅಧಿಕಾರಿಗಳು ವೈರಾಣು ತಡೆಗೆ ಪ್ರಯತ್ನಿಸಬೇಕು. ಜನತೆಯೂ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು.

ಡಿಸಿ ದೀಪಾ ಚೋಳನ್‌ ಅವರು ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಮತ್ತು ನಿಗಾ ಇರಿಸಲ್ಪಟ್ಟ ಶಂಕಿತರ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ ಅವರು ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಪಿಪಿಟಿ ಮೂಲಕ ವಿವರಿಸಿದರು.

Advertisement

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದೀಲಿಪ್‌, ಎಸ್‌ಪಿ ವರ್ತಿಕಾ ಕಟಿಯಾರ, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಇನ್ನಿತರರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ರವಿವಾರದ ಜನತಾ ಕರ್ಫ್ಯೂಗೆ ಜಿಲ್ಲೆಯ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಹಕಾರ ನೀಡಬೇಕು. ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಎಲ್ಲರೂ ಮನೆಯಲ್ಲಿದ್ದು, ವೈರಾಣು ವಿರುದ್ಧ ಜನಜಾಗೃತಿ ಮೂಡಿಸಬೇಕು. -ಜಗದೀಶ ಶೆಟ್ಟರ್‌, ಜಿಲ್ಲಾ ಉಸ್ತುವಾರಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next