ನವದೆಹಲಿ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಬುಧವಾರ(ನವೆಂಬರ್ 17) ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಹಿಂಸೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ;ಕಂಗನಾ ಟೀಕೆಗೆ ನೇತಾಜಿ ಪುತ್ರಿ ಹೇಳಿದ್ದೇನು
ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ಪಾರದರ್ಶಕತೆ, ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ನೇಮಕ ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ವನ್ನು ಸುಪ್ರೀಂಕೋರ್ಟ್ ಈ ಸಂದರ್ಭದಲ್ಲಿ ಪುನರ್ ರಚಿಸಿದ್ದು, ಉತ್ತರಪ್ರದೇಶದ ಸ್ಥಳೀಯರಲ್ಲದ ಮೂವರು ಐಪಿಎಸ್ (ಎಸ್ ಬಿ ಶಿರೋಡ್ಕರ್, ದೀಪಿಂದರ್ ಸಿಂಗ್, ಪದ್ಮಜಾ ಚೌಹಾಣ್) ಅವರ ಹೆಸರನ್ನು ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.
ನಿವೃತ್ತ ನ್ಯಾಯಾಧೀಶರ ವರದಿ ಸಲ್ಲಿಕೆ ಹಾಗೂ ಆರೋಪಪಟ್ಟಿ ಸಲ್ಲಿಕೆಯಾದ ನಂತರ ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ವರದಿ ಹೇಳಿದೆ.
ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸಲು ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಬೇಕೆಂದು ಸುಪ್ರೀಂಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.