ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ ಅವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿರುವ ಆರೋಪದ ಸಂಬಂಧ 2014ರಲ್ಲಿ ಲೋಕಾಯುಕ್ತ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.
ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಹೇಳಿಕೆ ನೀಡಿದೆ.
ಈ ವೇಳೆ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ವಾದ ಮಂಡಿಸಿ, ಲೋಕಾಯುಕ್ತರು 2014ರ ಆ.5ರಂದು ಹೊರಡಿಸಿರುವ ಆದೇಶವನ್ನು ಮೂರು ತಿಂಗಳಲ್ಲಿ ಅನುಷ್ಠಾನಗೊಳಿಸಿ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ವಿವಿಧ ಸರ್ವೇ ನಂಬರ್‌ಗಳಲ್ಲಿ 110 ಎಕರೆ ಗೋಮಾಳ ಸೇರಿದಂತೆ ಒಟ್ಟು 200 ಎಕರೆ ಭೂಮಿ ಒತ್ತುವರಿಯಾಗಿದೆ. ಈ ಪೈಕಿ ತಮ್ಮ ಪ್ರಭಾವ ಬಳಿಸಿ ಸುಮಾರು 54 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಬಂಧಿ ಸಾವಿತ್ರಮ್ಮ ಮತ್ತು ಶಾಸಕ ಡಿ.ಸಿ.ತಮ್ಮಣ್ಣ ಕಬಳಿಕೆ ಮಾಡಿದ್ದಾರೆ. ಕಬಳಿಕೆ ಮಾಡಿರುವ ಜಮೀನು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿದೆ. ಅದರ ಮಾರುಕಟ್ಟೆ ಮೌಲ್ಯ ಪ್ರತಿ ಎಕರೆಗೆ ಸುಮಾರು 75 ಲಕ್ಷದಿಂದ 1 ಕೋಟಿ ರೂ. ಇದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರು. ನಷ್ಟವಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದರು.
ಅಲ್ಲದೆ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತಿತರರು ಮಾಡಿರುವ ಭೂ ಒತ್ತುವರಿ ವಿರುದ್ಧ ಹದಿನೈದು ದಿನಗಳಲ್ಲಿ ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ ಕರ್ನಾಟಕ ಲೋಕಾಯುಕ್ತ 2014 ಆ.5ರಂದು ಆದೇಶ ಮಾಡಿದ್ದರು. ಆದರೆ, ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು. ಲೋಕಾಯುಕ್ತರ ಆದೇಶ ಜಾರಿಗೆ ತರುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು.