ಮುಂಬೈ: ವಾಣಿಜ್ಯ ನಗರಿ ಮುಂಬೈ ಮತ್ತು ಮಹಾರಾಷ್ಟ್ರದ ಇತರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದ ಪರಿಣಾಮ ಘಾಟ್ಕೋಪರ್ ಮತ್ತು ರತ್ನಗಿರಿ ಜಿಲ್ಲೆಯ ಚಿಪ್ಲುನ್ ನಲ್ಲಿ ಭಾರೀ ಭೂಕುಸಿತ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ
ಘಾಟ್ಕೋಪರ್ ನ ಪಂಚಶೀಲ್ ನಗರದಲ್ಲಿ ಮಂಗಳವಾರ (ಜುಲೈ 05) ಬೆಳಗ್ಗೆ ಭೂಕುಸಿತ ಉಂಟಾಗಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಆದರೆ ಈವರೆಗೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.
ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದು, ಮನೆಯೊಂದು ಹಾನಿಗೀಡಾಗಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದೇ ರಿತಿ ಚಿಪ್ಲುನ್ ನಲ್ಲಿನ ಭೂಕುಸಿತ ಕೂಡಾ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಂಡೆಯೊಂದು ರಸ್ತೆಗೆ ಉರುಳಿ ಬೀಳುತ್ತಿರುವ ದೃಶ್ಯ ದಾಖಲಾಗಿದೆ.
ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದರಿಂದ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸೋಮವಾರ ಸ್ಥಗಿತಗೊಂಡಿತ್ತು. ಮುಂದಿನ ಐದು ದಿನಗಳ ಕಾಲ ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.