Advertisement
ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳಲು ಮುಂದಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಿಲ್ಲಾಧ್ಯಕ್ಷ ಹುದ್ದೆಯ ಪಟ್ಟ ಕಟ್ಟಲು ಚಿಂತನೆ ನಡೆಸಿದ್ದಾರೆ. ಈಗಾಗಲೇ ಈ ನಿಟ್ಟಿನಲ್ಲಿ ಹಲವು ಶಾಸಕರ ಜತೆಯೂ ಸಮಾಲೋಚನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
Related Articles
Advertisement
ವಿಭಾಗಾವಾರು ಸಮಾವೇಶ: ಬಹುತೇಕ ಫೆಬ್ರವರಿ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯಲಿದ್ದು ಆ ನಡುವೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಿ ತಳಮಟ್ಟದಿಂದ ಪಕ್ಷ ಸಂಘಟನೆಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ವಿಭಾಗವಾರು ಮಹಿಳಾ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬುದನ್ನು ಜೆಡಿಎಸ್ ಕಾದು ನೋಡುತ್ತಿದ್ದು, ಆ ನಂತರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಯೋಚಿಸಲಿದೆ. ಅಲ್ಲಿವರೆಗೂ ಎಚ್.ಕೆ.ಕುಮಾರಸ್ವಾಮಿಯವರನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ.
ಒಂದೊಮ್ಮೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರ ನೇಮಕವಾದರೆ ಯುವ ಘಟಕದ ಅಧ್ಯಕ್ಷ ಸ್ಥಾನವೂ ಬದಲಾಗಬಹುದು. ನಿಖೀಲ್ ಕುಮಾರಸ್ವಾಮಿ ಬದಲು ಬೇರೊಬ್ಬರ ನೇಮಕವಾಗಬಹುದು. ನಿಖೀಲ್‌ಗೆ ರಾಜ್ಯ ಘಟಕದಲ್ಲೇ ಪ್ರಮುಖ ಹೊಣೆಗಾರಿಕೆ ನೀಡಬಹುದು ಎಂದು ಹೇಳಲಾಗುತ್ತಿದೆ.
ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಬಲಪಡಿಸಲು ಚಿಂತನೆ: ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಬಲಪಡಿಸಿ ದೈನಂದಿನ ರಾಜಕೀಯ ಹಾಗೂ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿ ಆ ಮೂಲಕ ಜನರನ್ನು ತಲುಪುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದು, ಅದಕ್ಕಾಗಿ ಸೂಕ್ತ ತಂಡ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
* ಎಸ್. ಲಕ್ಷ್ಮಿನಾರಾಯಣ