ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಅಂಗವಾಗಿ ಅವರ ಸ್ಮಾರಕವಾದ “ಸದೈವ್ ಅಟಲ್’ನಲ್ಲಿ ಬುಧವಾರ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಜತೆಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಓಂ ಬಿರ್ಲಾ, ಅಮಿತ್ ಶಾ, ಜೆ.ಪಿ.ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬಿಜೆಪಿಯ ಮಿತ್ರ ಪಕ್ಷಗಳ ನಾಯಕರಾದ ಟಿಡಿಪಿಯ ಚಂದ್ರಬಾಬು ನಾಯ್ಡು, ಹಲವರು ವಾಜಪೇಯಿಗೆ ಪುಷ್ಪ ನಮನ ಸಲ್ಲಿಸಿದರು.
ಪ್ರಧಾನಿ ಮೋದಿ ಟ್ವೀಟ್ ಮಾಡಿ ವಾಜಪೇಯಿ ಅವರು ಹೇಗೆ ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಿದರು ಹಾಗೂ ದೇಶಕ್ಕೆ ಅವರು ನೀಡಿದ ಹೊಸ ಆಯಾಮ ಎಂದಿಗೂ ಸ್ಮರಣೀಯ ಎಂದಿದ್ದಾರೆ.
ಬಿಜೆಪಿ ವತಿಯಿಂದ ದೇಶದ ವಿವಿಧ ಭಾಗಗಳಲ್ಲಿ ವೈವಿಧ್ಯ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.