ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನವಷ್ಟೇ ಬಾಕಿ ಇದ್ದು, ಈವರೆಗೆ 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ.
ಒಟ್ಟು 28 ಪುರುಷರು, ಒರ್ವ ಮಹಿಳೆ ಸೇರಿದಂತೆ 29 ಅಭ್ಯರ್ಥಿಗಳು 40 ಉಮೇದುವಾರಿಕೆಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿಯಿಂದ 3, ಕಾಂಗ್ರೆಸ್‌ನಿಂದ 5, ಜೆಡಿಎಸ್‌ನಿಂದ 1 ಹಾಗೂ 20 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರದಿಂದ 12, ಬೆಂಗಳೂರು ಪದವೀಧರ ಕ್ಷೇತ್ರದಿಂದ 8, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 6, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 6, ನೈಋತ್ಯ ಪದವೀಧರ ಕ್ಷೇತ್ರದಿಂದ 3, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 5 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಮೇ 20 ಕೊನೆ ದಿನವಾಗಿದೆ.