ಹಾಸನ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಬಯಸಿ ಅರ್ಜಿಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ನೀಡದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳುವುದಾಗಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಗಂಗಾಧರ್ ಬಹುಜನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯು ಎಸ್ಸಿ, ಎಸ್ಟಿ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಸಂಖ್ಯೆಯನ್ನು ಕಡಿತಗೊಳಿಸುವಂತೆ ಹೊರಡಿಸಿರುವ ದಲಿತ ವಿರೋಧಿ ಹಾಗೂ ವಿದ್ಯಾರ್ಥಿ, ಯುವಜನ ವಿರೋಧಿ ಆದೇಶವನ್ನು ಹಿಂಪಡೆದು ವಿದ್ಯಾರ್ಥಿನಿಲಯ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳನ್ನೂ ದಾಖಲಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಮಂಜೂರಾತಿ ಸಂಖ್ಯೆಗಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡರೆ ಅಂತಹ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಇತರೆ ಸಮಸ್ಯೆಗಳಿಗೆ ನಿಲಯದ ಮೇಲ್ವಿಚಾರಕರು, ಸಹಾಯಕ ನಿರ್ದೇಶಕರು ಹಾಗೂ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು 2018 ಆಗಸ್ಟ್ 27 ರಂದು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
ದಲಿತ ವಿರೋಧಿ ಆದೇಶ: ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರಿಗೆ ಈ ಆದೇಶ ತಪಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಮ್ಮ ಇಲಾಖೆ ಮೂಲಕ ಹೊರಡಿಸಿರುವ ಆದೇಶ ದಲಿತ ವಿರೋಧಿಯಾಗಿದೆ ಎಂದರು.
ನಿರ್ವಹಣಾ ವೆಚ್ಚ ಹೆಚ್ಚಳ ಮಾಡಿ: ವಿದ್ಯಾರ್ಥಿ ನಿಲಯಗಳಲ್ಲಿ ತಿಂಗಳಿಗೆ ವಿದ್ಯಾರ್ಥಿಯೊಬ್ಬರಿಗೆ ನೀಡುತ್ತಿರುವ ನಿರ್ವಹಣಾ ಭತ್ಯೆ 1,600 ರಿಂದ 3 ಸಾವಿರ ರೂ.ಗಳಿಗೆ ಏರಿಸಬೇಕು ನಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನಹರಿಸದಿದ್ದರೇ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ, ಉಪಾಧ್ಯಕ್ಷ ಎ.ಪಿ. ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕೀರ್ತಿ, ಜಿಲ್ಲಾ ಕಾರ್ಯದರ್ಶಿ ದೇವರಾಜು ತಿರುಪತಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.