Advertisement

ನನ್ನ ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ: ಕೈ ಹಿಡಿದ ಬಾಬುರಾವ್ ಚಿಂಚನಸೂರು

10:47 PM Mar 22, 2023 | Team Udayavani |

ಬೆಂಗಳೂರು : ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

Advertisement

ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಶರಣು ಪ್ರಕಾಶ್ ಪಾಟೀಲ್ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್,‘ಈಗಾಗಲೇ ಹಳ್ಳಿಗಳಿಂದ ರಾಜ್ಯ ಮಟ್ಟದವರೆಗೆ ನೂರಾರು ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ಇದ್ದರೂ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಕಲ್ಯಾಣವಾಗಿ, ಅವರ ಜೀವನ ಭದ್ರಾವಾಗಲಿದೆ. ಈ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ನಂಬಿಕೆ ಇಟ್ಟು, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು, ಅವರ ಅನುಯಾಯಿಯಾಗಿ ಪಕ್ಷ ಸೇರುತ್ತಿದ್ದಾರೆ. ಅವರ ರಾಜೀನಾಮೆ ನಿನ್ನೆ ಅಂಗೀಕಾರವಾಗಿದ್ದು, ಇಂದು ಹೊಸ ವರ್ಷದ ಹೊಸ ದಿನ ಆರಂಭವಾಗಲಿ ಎಂದು ಪಕ್ಷಕ್ಕೆ ಸೇರುತ್ತಿದ್ದಾರೆ. ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಬೇಕು ಎಂದು ಭಾವಿಸಿದ್ದೆವು. ಪ್ರಿಯಾಂಕ್ ಖರ್ಗೆ ಅವರು ಊರಿನಲ್ಲಿ ಇಲ್ಲ. ಈ ಸಂದರ್ಭದಲ್ಲಿ ಒಂದು ದಿನವೂ ವ್ಯರ್ಥ ಮಾಡುವುದು ಬೇಡ ಎಂದು ಈ ಶುಭದಿನ ಪಕ್ಷಕ್ಕೆ ಸೇರುತ್ತಿದ್ದಾರೆ. ಪಕ್ಷದ ಎಲ್ಲ ನಾಯಕರ ಜತೆ ಚರ್ಚೆ ಮಾಡಿ ಅವರನ್ನು ಬಹಳ ಸಂತೋಷದಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ’ ಎಂದರು.

‘ನಾಡಿನ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಹೊಸ ವರ್ಷ ಹೊಸ ಆಯಾಮ, ಹೊಸ ಬದಲಾವಣೆ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈಗ ರಾಜ್ಯದಲ್ಲಿ ಬದಲಾವಣೆ ತರಲು ದೇವರು ಒಂದು ಅವಕಾಶ ಕಲ್ಪಿಸಿದ್ದಾನೆ. ನಾವು ರಾಜ್ಯದ ಜನರಿಗೆ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದು ನಾವು ನುಡಿದಂತೆ ನಡೆಯುತ್ತೇವೆ. ನಾವು ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದು, ನಮ್ಮ ನಿರೀಕ್ಷೆಗೂ ಮೀರಿ ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ’ ಎಂದು ತಿಳಿಸಿದರು.

ಬಾಬುರಾವ್ ಚಿಂಚನಸೂರು ಮಾತನಾಡಿ, ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ.ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಎಂದು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ ಎಂದರು.

Advertisement

ಖರ್ಗೆ ಅವರ ಮೇಲೆ ಕೋಪಗೊಂಡು ನೀವು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಿರಿ ಎಂದು ಚಿಂಚನಸೂರು ಅವರನ್ನು ಕೇಳಿದಾಗ, ‘ತಂದೆ ಮಗನ ಜಗಳ ಇದ್ದೇ ಇರುತ್ತದೆ. ಅದು ಈಗ ಸರಿ ಹೋಗಿದೆ‘ ಎಂದು ಉತ್ತರಿಸಿದರು.

ಖರ್ಗೆ ಅವರನ್ನು ಸೋಲಿಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ತೊಡೆ ತಟ್ಟಿದ್ದವರು ಈಗ ಅವರ ಪಕ್ಷ ಸೇರುತ್ತಿದ್ದೀರಿ, ಇದು ಅವಕಾಶವಾದಿ ರಾಜಕಾರಣವಲ್ಲವೇ ಎಂದು ಕೇಳಿದಾಗ, ‘ನಾನು ಅವಕಾಶವಾದಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನನಗೆ ತಂದೆ, ತಾಯಿ, ಮಕ್ಕಳಿಲ್ಲ. ನಾನು ಮತ್ತು ನನ್ನ ಪತ್ನಿ ಮಾತ್ರ ಇದ್ದೇವೆ. ಸುಮಾರು 30 ವರ್ಷಗಳಿಂಗ ಜನರ ಸೇವೆ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ದುಡಿದಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ನೀಡುತ್ತೇನೆ. ಚಿತ್ತಾಪುರದಲ್ಲಿ ಬಿಜೆಪಿ ಹೇಳಹೆಸರಿಲ್ಲದಂತೆ ಮಾಡುತ್ತೇವೆ’ ಎಂದರು.

ನಿಮ್ಮ ಜತೆ ಬಿಜೆಪಿ ಸೇರಿದ್ದವರನ್ನು ಕರೆ ತರುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ‘2023 ರ ಚುನಾವಣೆಯಲ್ಲಿ ಯಾರು ಎಲ್ಲಿರುತ್ತಾರೆ ಎಂದು ಎಲ್ಲರಿಗೂ ತಿಳಿಯಲಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next