ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಕ್ವಾರಂಟೈನ್ ಆಗಿರುವ ಪಾಲಕ, ಪೋಷಕರ ಮಕ್ಕಳು ಜೂ.25 ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಲು ಪತ್ತೆ ಹಚ್ಚುವ ಕಾರ್ಯ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ ಆಗಿರುವ ಯಾವುದೇ ನೂನ್ಯತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮರುಕಳಿಸದಂತೆ ಎಚ್ಚರ ವಹಿಸುತ್ತೇವೆ.
ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ. ಪಿಯು ಪರೀಕ್ಷೆಯಲ್ಲಿ ಸಾಮಾಜಿಕ ಅಂತರದ ಲೋಪವಾದ ಕೇಂದ್ರಗಳ ಸಿಬ್ಬಂದಿ ವಿರುದ್ಧ ಕ್ರಮ ತೆಗೆದು ಕೊಳ್ಳಲಿದ್ದೇವೆಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿ ಪೋಷಕ, ಪೋಷಕರು ಅಥವಾ ಜತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೋವಿಡ್ 19 ಹಿನ್ನೆಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಲಾಗುತ್ತಿದೆ.
ಈ ಸಂಬಂಧ ಲಭ್ಯವಾಗಿರುವ ಮಾಹಿತಿ ಆಧಾರದಲ್ಲಿ ಶಿಕ್ಷಣ ಇಲಾಖೆ ದಾಖಲೆಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂಟೈನ್ಮೆಂಟ್ ವಲ ಯದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವ ಕಾಶ ಇಲ್ಲ. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶವಿದೆ ಮತ್ತು ರೆಗ್ಯುಲರ್ ವಿದ್ಯಾರ್ಥಿ ಯಾಗಿಯೇ ಪರೀಕ್ಷೆ ಬರೆಯಲಿದ್ದಾರೆಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ. ನ್ಯಾಯಾಲಯದ ಸೂಚನೆಯಂತೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಜಿಲ್ಲಾ ಉಪನಿರ್ದೇಶರು ಅನ್ಯ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪರಿಶೀಲಿಸುವ ಕಾರ್ಯ ಆರಂಭವಾಗಿದೆ. ಅಲ್ಲದೆ, ಶಿಕ್ಷಣ ಇಲಾಖೆ ಆಯುಕ್ತರೂ ಜಿಲ್ಲಾ ಉಪನಿರ್ದೇಶಕರೊಂದಿಗೆ ಸಂವಾದ ಮಾಡಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿ ತಲಾ 2 ಮಾಸ್ಕ್ ಪಡೆಯಲಿದ್ದಾರೆ.
ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಿ ಕಾಯ್ದಿರಿಸಿದ್ದೇವೆ. ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಅತ್ಯಂತ ಸುರಕ್ಷಿತವಾಗಿ ಪರೀಕ್ಷೆ ನಡೆ ಯಲಿದೆ ಎಂದರು.
ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೋವಿಡ್ 19 ಇಲ್ಲ: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆ ಎಂಬ ಸುದ್ದಿ ಸತ್ಯಕ್ಕೆ ದೂರ ಮತ್ತು ಆ ವಿದ್ಯಾರ್ಥಿನಿಯ ಕೋವಿಡ್ 19 ವರದಿ ನೆಗೆಟಿವ್ ಬಂದಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಹೀಗಾಗಿ ಆ ವಿದ್ಯಾರ್ಥಿನಿ ಜತೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ ಯಾವುದೇ ಪರೀಕ್ಷಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯವಿಲ್ಲ. ಆ ವಿದ್ಯಾರ್ಥಿನಿಯೂ ಆರೋಗ್ಯದ ದೃಷ್ಟಿಯಿಂದ ಸುರಕ್ಷಿತವಾಗಿದ್ದಾಳೆ. ಆಕೆಯ ತಂದೆ ಈಗಾಗಲೇ ಕ್ವಾರಂಟೈನ್ ನಲ್ಲಿದ್ದು, ಆರೋಗ್ಯ ಇಲಾಖೆ ನಿಗಾದಲ್ಲಿ ಸೂಕ್ತ ಚಿಕಿತ್ಸೆಗೊಳಗಾಗಿದ್ದಾರೆ. ಈ ಸಂಬಂಧ ಅಗತ್ಯ ತನಿಖೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಲಾಗುತ್ತದೆ ಎಂದರು.