ಶಿವಮೊಗ್ಗ: ನಗರದ ಸೋಗಾನೆ ಬಳಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಗುರುವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, 2ನೇ ಹಂತದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ನಿಗದಿತ ಸಮಯದೊಳಗೆ ಯೋಜನೆ ಪೂರ್ಣಗೊಳ್ಳಬೇಕೆಂದು ತಿಳಿಸಿದರು. ಕಾಮಗಾರಿಗೆ ಬೇಕಾದಂತಹ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡಲಾಗುವುದು. ನಿಮ್ಮ ಕೆಲಸವನ್ನು ಚುರುಕಾಗಿ ಮಾಡಬೇಕಿದೆ ಎಂದ ಅವರು, ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ತಿಳಿಸಿದರು.
ಇದಾದ ನಂತರ ಕಾರಾಗೃಹಕ್ಕೆ ಭೇಟಿ ನೀಡಿದ ಸಂಸದರು, ಕೋವಿಡ್ ಹಿನ್ನೆಲೆಯಲ್ಲಿ ಜೈಲಿನಲ್ಲಿ ತೆಗೆದುಕೊಂಡಿರುವ ಸುರಕ್ಷತಾಕ್ರಮಗಳನ್ನು ಪರಿಶೀಲಿಸಿದರು. ಯಾವುದೇ ಕಾರಣಕ್ಕೂ ಇಲ್ಲಿ ಕೋವಿಡ್ ಸೋಂಕು ಹರಡದಂತೆ ಗಮನ ಹರಿಸಬೇಕೆಂದು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ರೈಲ್ವೆ ನಿಲ್ದಾಣದ ಬಳಿನಡೆಯುತ್ತಿರುವ ಒಳವರ್ತುಲ ರಸ್ತೆ ಕಾಮಗಾರಿ ಪರಿಶೀಲಿಸಿದ ಅವರು, ಶೀಘ್ರಗತಿಯಲ್ಲಿ ರಸ್ತೆ ಕಾಮಗಾರಿ ನಡೆಸುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕೆಂದು ಸೂಚಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಕಾಂತರಾಜ್, ಸಹಾಯಕ ಇಂಜಿನಿಯರ್ ಸಂಪತ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಮತ್ತಿತರರು ಇದ್ದರು.