Advertisement

ಜಿಲ್ಲೆಯ ಸಹಕಾರ ರಂಗದ ಗತವೈಭವ ಮರಳಲಿ

10:36 AM Feb 19, 2020 | Suhan S |

ಧಾರವಾಡ: ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರ ನಿರ್ವಹಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹೇಳಿದರು.

Advertisement

ಆಲೂರು ವೆಂಕಟರಾವ್‌ ಸಭಾಭವನದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌, ಕೆಸಿಸಿ ಬ್ಯಾಂಕ್‌ ಮತ್ತು ಸಹಕಾರ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಶೇಷ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಬ್ಯಾಂಕುಗಳ ರಾಷ್ಟ್ರೀಕರಣ ಗೊಳಿಸುವ ಪೂರ್ವದಲ್ಲಿ ಸಹಕಾರಿ ವಲಯದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗಕ್ಕೆ ನೀಡಿದ ಕೊಡುಗೆ ಅಪಾರ. ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ. ಅಖಂಡ ಧಾರವಾಡ ಜಿಲ್ಲೆಯು ಸಹಕಾರ ಚಳವಳಿಯ ಉಗಮಸ್ಥಾನ ಎಂಬ ಹೆಗ್ಗಳಿಕೆ ಹೊಂದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗುವ ಮುಖಾಂತರ ಗತವೈಭವಕ್ಕೆ ಮರಳಬೇಕು. ಈ ದಿಸೆಯಲ್ಲಿ ಸಹಕಾರ ಸಂಘಗಳ ಆಡಳಿತ ಮಂಡಳಿ ಶಕ್ತಿ ಮೀರಿ ಶ್ರಮಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್‌ ಮತ್ತು ಕೆಸಿಸಿ ಬ್ಯಾಂಕ್‌ ಅಧ್ಯಕ್ಷ ಬಾಪುಗೌಡ ಪಾಟೀಲ ಮಾತನಾಡಿ, ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ ಆಗಿರುವ ಕೆಸಿಸಿ ಬ್ಯಾಂಕ್‌ಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಜೀವಾಳವಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್‌ ಸೂಕ್ತ ತರಬೇತಿ ನೀಡುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ಕೃಷಿ ಕ್ಷೇತ್ರದ ಸಾಧನೆಗಾಗಿ ಡಾಕ್ಟರೆಟ್‌ ಪಡೆದ ಮಹಾಲಕ್ಷ್ಮೀ ಕೋ-ಆಪ್‌ ಬ್ಯಾಂಕ್‌ ಚೇರ್‌ಮನ್‌ ವಿಜಯ ಕುಲಕರ್ಣಿ, ಕಲಘಟಗಿ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಎಂ.ಜಿ. ಪಾಟೀಲ ಉಪನ್ಯಾಸ ನೀಡಿದರು. ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಪಿ. ಪಾಟೀಲ, ನಿರ್ದೇಶಕ ಬಸವರಾಜ ಸುಲ್ತಾನಪುರಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ಶಿವಕುಮಾರಗೌಡ ಪಾಟೀಲ, ಕೆಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಸ್‌.ವೈ. ಪಾಟೀಲ, ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಕೆ. ಮುನಿಯಪ್ಪ, ಜಿಲ್ಲಾ ಸಹಕಾರ ಯೂನಿಯನ್‌ ಉಪಾಧ್ಯಕ್ಷ ಪ್ರತಾಪ ಚವ್ಹಾಣ, ಕೆಸಿಸಿ ಬ್ಯಾಂಕ್‌, ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕರು, ಸಹಕಾರ ಇಲಾಖೆ ಅಧಿಕಾರಿಗಳು ಇದ್ದರು. ಸವಿತಾ ಹಿರೇಮಠ ಸ್ವಾಗತಿಸಿದರು. ಅಶೋಕ ಸೋಬಾನದ ನಿರೂಪಿಸಿ, ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next