Advertisement

ಸ್ಪರ್ಧಾತ್ಮಕ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ

01:29 PM May 05, 2022 | Team Udayavani |

ದಾವಣಗೆರೆ: ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ಖಂಡನೀಯ ಎಂದು ಆರೋಪಿಸಿ ಬುಧವಾರ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಕನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸಿ ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಲಕ್ಷಾಂತರ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದ ಅಕ್ರಮ ನಡೆಯುತ್ತಿರುವುದು ಖಂಡನೀಯ ಮತ್ತು ಅನ್ಯಾಯ ಎಂದು ದೂರಿದರು.

ಇತ್ತೀಚಿನ ಕೆಲ ವರ್ಷಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಅಕ್ರಮ ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳನ್ನು ಹತಾಶರನ್ನಾಗಿಸಿದೆ. ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿವೆ. 3-4 ವರ್ಷಗಳಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಸರಣಿಯಂತೆ ಬಯಲಾಗತೊಡಗಿದೆ. ಸರ್ಕಾರಿ ಉದ್ಯೋಗ ಗಳಲ್ಲಿ ಅರ್ಹ ಮತ್ತು ಪ್ರತಿಭಾವಂತರಿಗೆ ಅವಕಾಶ ಲಭಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅತ್ಯಂತ ಪಾರದರ್ಶಕ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತ ಬರಲಾಗಿದೆ. ಆದರೆ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿರುವುದು ಪರೀಕ್ಷೆಗಳ ನೈಜ ಉದ್ದೇಶವನ್ನೇ ಬುಡಮೇಲು ಮಾಡಿವೆ. ಆಡಳಿತ ವ್ಯವಸ್ಥೆ, ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳೂ ಅಕ್ರಮಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಖಂಡನೀಯ ಎಂದು ಆರೋಪಿಸಿದರು.

ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಾನೂನು, ನಿಯಮಾವಳಿಗಳ ಅನುಸಾರ ನ್ಯಾಯಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಪ್ಪಿತಸ್ಥರು ಎಷ್ಟೇ ದೊಡ್ಡವರು ಹಾಗೂ ಪ್ರಭಾವಶಾಲಿಯಾಗಿದ್ದರೂ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕೊಳ್ಳೇರ, ಅವಿನಾಶ್‌, ನರೇಂದ್ರ, ಶಶಾಂಕ್‌, ಕೊಟ್ರೇಶ್‌, ದೊಡ್ಡೇಶ್‌, ಆದರ್ಶ ಇತರರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next