ಬೆಂಗಳೂರು: ಕನ್ನಡ ಸಿನಿಮಾರಂಗದಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಚಿತ್ರಗಳು ಮೂಡಿ ಬರಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ಅಕಾಡೆಮಿ, ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ “12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.
ಪಿಂಚಣಿ ಯೋಜನೆಗೆ ಮನವಿ: ಕನ್ನಡ ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮಾತನಾಡಿ, ಯಡಿಯೂರಪ್ಪ ಅವರು ಅಕಾಡೆಮಿಗೆ 5 ಕೋಟಿ ರೂ.ಅನುದಾನ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಲವು ಕಲಾವಿದರು ಆರ್ಥಿಕವಾಗಿ ಸದೃಢರಾಗಿಲ್ಲ.
ಅವರ ಜೀವನಕ್ಕೆ ಅನುಕೂಲವಾಗಲು ಪಿಂಚಣಿ ಯೋಜನೆ ಮತ್ತು ವೈದ್ಯಕೀಯ ಸೌಲಭ್ಯಗಳ ನೆರವು ನೀಡಬೇಕು ಎಂದು ಮನವಿ ಮಾಡಿದರು. ಹಂಪಿ, ಐಹೊಳೆ, ಶಿವಮೊಗ್ಗ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕನ್ನಡ ಸಿನಿಮಾರಂಗ ನಡೆದು ಬಂದ ಹಾದಿಯನ್ನು ತಿಳಿ ಹೇಳುವ ಸಂಬಂಧ ಮ್ಯೂಸಿಯಂ ಸ್ಥಾಪನೆ ಮಾಡುವ ಆಲೋಚನೆ ಅಕಾಡೆಮಿಗೆ ಇದೆ ಎಂದರು.
ಅನುದಾನಕ್ಕೆ ಮನವಿ: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜಯರಾಜ್ ಮಾತನಾಡಿ, ಈ ವರ್ಷ ನಡೆಯಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು. ಬಹುಭಾಷಾ ತಾರೆ ಜಯಪ್ರದ, ಹಿನ್ನೆಲೆಗಾಯಕ ಸೋನು ನಿಗಮ್, ಚಿತ್ರನಟ ಯಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.