ಚಿತ್ರದುರ್ಗ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ನಡೆಯುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಸುಗಮವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ-2022 ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ನಡೆದ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮಗಳು ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿ ನಡೆಯಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಬೇಕು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೋವಿಡ್ ನಿಯಾಮಾನುಸಾರ ಪರೀಕ್ಷಾ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪನೆ ಹಾಗೂ ಆರೋಗ್ಯ ಸಹಾಯಕರನ್ನು ನಿಯೋಜಿಸುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಬೇಕು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9448694592 ಸಂಪರ್ಕಿಸಬಹುದು ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಮಾತನಾಡಿ, ಮೇ 21ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12:30ರವರೆಗೆ ಪತ್ರಿಕೆ-1 ಸಾಮಾನ್ಯ ಪತ್ರಿಕೆ ವಿಷಯದ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2:30 ರಿಂದ ಸಂಜೆ 530ರವರೆಗೆ ಆಂಗ್ಲ ಭಾಷೆ ವಿಷಯದ ಪರೀಕ್ಷೆ ನಡೆಯಲಿದೆ. ಮೇ 22ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12:30ರವರೆಗೆ ಪತ್ರಿಕೆ-2 ಗಣಿತ, ವಿಜ್ಞಾನ, ಜೀವ ವಿಜ್ಞಾನ ಹಾಗೂ ಸಮಾಜ ಪಾಠಗಳು ವಿಷಯದ ಪರೀಕ್ಷೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಪತ್ರಿಕೆ-3 ಭಾಷಾ ಸಾಮರ್ಥ್ಯ ವಿಷಯದ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಆರ್. ರಂಗನಾಥ್, ಡಯಟ್ ಪ್ರಾಂಶುಪಾಲ ಎಸ್.ಕೆ.ಬಿ ಪ್ರಸಾದ್ ಸೇರಿದಂತೆ ಜಿಲ್ಲಾ ಖಜಾನೆ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಭಾಗವಹಿಸಿದ್ದರು.
8 ಕೇಂದ್ರಗಳಲ್ಲಿ ಪರೀಕ್ಷೆ
ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಮಹಾರಾಣಿ ಸಂಯುಕ್ತ ಪಿಯು ಕಾಲೇಜು, ಎಂ.ಕೆ. ಹಟ್ಟಿ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾವಿಕಾಸ ಪ್ರೌಢಶಾಲೆ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ, ವಾಸವಿ ಪ್ರೌಢಶಾಲೆ, ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆ ಸೇರಿದಂತೆ ಒಟ್ಟು ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 1982 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಮಾಹಿತಿ ನೀಡಿದರು.