ಗದಗ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಾವುದೇ ಲೋಪಗಳಾಗದಂತೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 21 ಹಾಗೂ ಮೇ 22 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಿಲ್ಲೆಯಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕೊಠಡಿಗಳ ಸ್ವತ್ಛತೆ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಇರುವ ಹಾಗೂ ಇಲ್ಲದಿರುವ ಕೊಠಡಿಗಳನ್ನು ಪರೀಕ್ಷೆಯ ಮೇಲ್ವಿಚಾರಕರು ಖುದ್ದಾಗಿ ಪರಿಶೀಲಿಸಬೇಕೆಂದು ತಿಳಿಸಿದರು.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಲ್ಲದೇ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯದ ಪೊಲೀಸ್ ಬಂದೋಬಸ್ತ್ ಒದಗಿಸಲು ಕ್ರಮ ಜರುಗಿಸಬೇಕು. ಪರೀಕ್ಷಾ ದಿನಗಳಂದು ಕೇಂದ್ರಗಳಲ್ಲಿ ಮೊಬೈಲ್, ವಾಚ್, ಲೋಹದ ವಸ್ತು ಸೇರಿದಂತೆ ಯಾವುದೇ ತರಹದ ಇಲೆಕ್ಟ್ರಾನಿಕ್ ವಸ್ತುಗಳನ್ನು ತರದಂತೆ ನಿಗಾ ವಹಿಸಬೇಕೆಂದು ನಿರ್ದೇಶಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಅಗತ್ಯ ಕ್ರಮ ವಹಿಸಬೇಕು. ಹೊರ ಜಿಲ್ಲೆಗಳಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪರೀಕ್ಷಾರ್ಥಿಗಳಿಗೆ ಸಾರಿಗೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸಿ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸಿ ಥರ್ಮಲ್ ಸ್ಕ್ಯಾನಿಂಗ ನಡೆಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಒಟ್ಟಾರೆಯಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ನಿಗಾ ವಹಿಸುವಂತೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1180 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳ, ನಿಯಂತ್ರಕ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಖಜಾನೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.