ಗದಗ: ತಂಬಾಕು ಮುಕ್ತ ವಾತಾವರಣದಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ಕುರಿತು ಸಾರ್ವಜನಿಕರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸಮೀಕ್ಷಣಾಧಿಕಾರಗಳ ಕಾರ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ನರ್ಸಿಂಗ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜರುಗಿದ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ಆಗುವ ಬಾಧಕಗಳ ಕುರಿತು ಇಂದಿನ ಯುವ ಜನತೆಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಪ್ರತಿವರ್ಷ ವಿಶ್ವದಾದ್ಯಂತ 60 ಲಕ್ಷ ಜನ ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ತಂಬಾಕು ನಿಯಂತ್ರಣಾಧಿಕಾರಿ ಡಾ| ಸತೀಶ ಸಿ. ಬಸರೀಗಿಡದ ಮಾತನಾಡಿ, ವಿಶ್ವದಾದ್ಯಂತ ತಡೆಗಟ್ಟಬಹುದಾದ ಕಾಯಿಲೆ ಮತ್ತು ಮರಣಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಚಿಕ್ಕವಯಸ್ಸಿನಲ್ಲೇ ತಂಬಾಕು ಸೇವೆಗೆ ಅಂಟಿಕೊಂಡವರು ನಾನಾ ರೀತಿಯ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಅರುಂಧತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್. ಸುರೇಶ, ಜಿಲ್ಲಾ ಆಹಾರ ಸುರಕ್ಷಣಾಧಿಕಾರಿ ಡಾ| ರಾಜೇಂದ್ರ ಎನ್. ಗಡಾದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ, ಜಿಲ್ಲಾ ತಂಬಾಕು ಸಲಹೆಗಾರ ಗೋಪಾಲ ಸುರಪುರ, ಡಿ.ಎಸ್. ಅಂಗಡಿ, ಬಸವರಾಜ ಲಾಲಗಟ್ಟಿ ಇದ್ದರು.
ಬಳಿಕ ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊಂಡ ಜಾಗೃತಿ ಜಾಥಾ ನಗರದ ಪ್ರಮುಖ ಮಾರ್ಗಗಳಲ್ಲಿ ಸಾಗಿತು. ಜಿಲ್ಲೆಯ ಆಶಾ ಕಾರ್ಯಕರ್ತರು, ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.