ಹಾವೇರಿ: ಬಿಜೆಪಿಯು ವಿಶ್ವದಲ್ಲಿಯೇ ಶ್ರೇಷ್ಠ ವಿಚಾರಗಳನ್ನು ಹೊಂದಿರುವ ಪಕ್ಷವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಮಂತ್ರಿ ಸ್ಥಾನದಲ್ಲಿ ನೋಡಬೇಕಾದರೆ ಪಕ್ಷದ ಕಾರ್ಯಗಳನ್ನು ತಳಮಟ್ಟಕ್ಕೆ ವಿಸ್ತರಿಸಬೇಕಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಏರ್ಪಡಿಸಿದ್ದ ಪಕ್ಷ ದ ಸಂಘಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಎಲ್ಲರೂ ಶ್ರಮಿಸಬೇಕು. ಪಕ್ಷದ ಕಾರ್ಯಕರ್ತರು ಯಾವುದೆ ಫಲಾಪೆಕ್ಷೆಯಿಲ್ಲದೇ ವಹಿಸಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ ಮೊತ್ತೊಮ್ಮೆ ಬಿಜೆಪಿ ಬೆಂಬಲಿಸುವಂತೆ ವಿನಂತಿಸಬೇಕು ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಲವೇ ಸ್ಥಾನಗಳ ಕೊರತೆಯಿಂದ ರಾಜ್ಯದ ಚುಕ್ಕಾಣಿ ಹಿಡಿವಲ್ಲಿ ಪಕ್ಷ ವಿಫಲವಾಯಿತು. ಆದರೆ ಕಾರ್ಯಕರ್ತರು ಶ್ರಮವಹಿಸಿ ಶ್ರದ್ಧೆಯಿಂದ ಪಕ್ಷದ ಕೆಲ ಕಾರ್ಯವನ್ನು ನಿರ್ವಹಿಸಿದ್ದಾರೆ. ಮುಂಬರುವ ಸ್ಥಳೀಯ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ರಾಷ್ಟ್ರದ ಹಿತಕ್ಕಾಗಿ ಮತ್ತಷ್ಟು ಶ್ರಮ ವಹಿಸಬೇಕು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕೆಲಸ ಮಾಡಬೇಕಾಗಿದೆ ಎಂದರು.
ಮಾಜಿ ಸಚಿವ, ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಪಕ್ಷಕ್ಕೆ ಕಾರ್ಯಕರ್ತರೆ ಸರ್ವಸ್ವವಾಗಿದ್ದು. ಕಾರ್ಯಕರ್ತರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮೊತ್ತೂಮ್ಮ ಅಧಿಕಾರಕ್ಕೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಯು.ಬಿ. ಬಣಕಾರ, ಡಿ.ಎಂ. ಸಾಲಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಶಿವಾನಂದ ಮ್ಯಾಗೇರಿ, ಸಂತೋಷ ಪಾಟೀಲ, ಡಾ| ಸಂತೋಷ ಆಲದಕಟ್ಟಿ ಇತರರು ಇದ್ದರು.