ಚಿಕ್ಕಬಳ್ಳಾಪುರ: ಹಸಿರು ಪಟಾಕಿ ಬಳಕೆ ಮಾಡಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಾಗರಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡಿದೆ. ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರಎಲ್ಲಾಅಗತ್ಯಕ್ರಮಗಳನ್ನುಕೈಗೊಂಡಿದೆ. ದೀಪಾವಳಿ ಸಂದರ್ಭದಲ್ಲಿ ಕೆಲವು ಮಾರ್ಗ ಸೂಚಿಗಳನ್ನು ನೀಡಿ ಆದೇಶ ಹೊರಡಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹಸಿರು ಪಟಾಕಿ ಮಾತ್ರ: ರಾಜ್ಯ ಸರ್ಕಾರದ ಆದೇಶವು ನ.07 ರಿಂದ 16 ರವರೆಗೆ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಮತ್ತು ಮಕ್ಕಳ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು. ಹಸಿರು ಪಟಾಕಿ ಹೊರತುಪಡಿಸಿ ಇತರೆ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಹಾಗೂ ಹಚ್ಚತಕ್ಕದಲ್ಲ ಎಂದರು.
ಮಾರ್ಗಸೂಚಿ ಪಾಲನೆ ಕಡ್ಡಾಯ: ಮಾರಾಟ ಮಳಿಗೆಗಳ ಸುತ್ತಮುತ್ತ ದಿನನಿತ್ಯಸ್ಯಾನಿಟೈಸೇಷನ್ ಮಾಡುವುದು, ಹಸಿರು ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಜನದಟ್ಟಣೆ ಸೇರಿದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರ ಹೊರಡಿಸಿರುವ ಆದೇಶದಂತೆ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಉಪ ವಿಭಾಗಾಧಿಕಾರಿ ರಘುನಂದನ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ವಿಜಯಲಕ್ಷ್ಮೀ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.