Advertisement

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

12:25 AM Jul 27, 2024 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಆ ಪಕ್ಷದ ಹಿರಿಯ ನಾಯಕರ ಅಸಮಾಧಾನದ ಸರಣಿ ಮುಂದುವರಿದಿದ್ದು ಇದೀಗ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತು ಪಕ್ಷದ ವಿಧಾನ ಮಂಡಲ ಕಾರ್ಯತಂತ್ರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

Advertisement

ರಾಜ್ಯದ ಹತ್ತು ಹಲವು ಸಮಸ್ಯೆಗಳ ಬಗ್ಗೆ ವಿಧಾನ ಮಂಡಲದ ಕಲಾಪದಲ್ಲಿ ಚರ್ಚೆ ಮಾಡಿ ಜನರ ಸಂಕಷ್ಟದ ಬಗ್ಗೆ ಬೆಳಕು ಚೆಲ್ಲುವುದು ಬಿಟ್ಟು , ಇಡೀ ಅಧಿವೇಶನದಲ್ಲಿ ಕಾಲಹರಣಮಾಡಿ ಆಡಳಿತ ಪಕ್ಷದೊಂದಿಗೆ ವಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿ ಕೊಳ್ಳುವಂತೆ ಆಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರ ನಡುವೆ ತಾಳಮೇಳವಿಲ್ಲ, ಇದರ ಲಾಭವನ್ನು ಸರಕಾರ ಪಡೆದು ಕೊಳ್ಳುವಂತಾಗಿದೆ ಎಂದು ಲಿಂಬಾವಳಿ ಕಿಡಿ ಕಾರಿದ್ದಾರೆ.

ಈ ಬಾರಿಯ ಅಧಿವೇಶನದಲ್ಲಿ ವಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫ‌ಲವಾಗಿದೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ. ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ಲಿಂಬಾವಳಿ ಹೇಳಿದ್ದಾರೆ.

ಅಧ್ಯಕ್ಷ- ವಿಪಕ್ಷ ನಾಯಕರ ಮಧ್ಯೆ ಇಲ್ಲ ತಾಳ-ಮೇಳ’
ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next