Advertisement

ಗೋನವಾಟ್ಲ-ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ಕ್ರಮ

03:55 PM Aug 09, 2019 | Naveen |

ಲಿಂಗಸುಗೂರು: ತಾಲೂಕಿನ ಗೋನವಾಟ್ಲ ಗ್ರಾಮದಿಂದ ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಭರವಸೆ ನೀಡಿದರು.

Advertisement

ತಾಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಗುರುವಾರ ಭೇಟಿ ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ ಮಾತನಾಡಿದರು. ಗೋನವಾಟ್ಲ ಗ್ರಾಮದಿಂದ ಕಡದರಗಡ್ಡಿ ಗ್ರಾಮಕ್ಕೆ ಸೇತುವೆ ನಿರ್ಮಾಣಕ್ಕೆ 18 ಕೋಟಿ ರೂ. ಅಂದಾಜು ವೆಚ್ಚ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಇದಕ್ಕೆ ಅವರು ಕೂಡಾ ಸ್ಪಂದಿಸಿದ್ದು, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಸೇತುವೆ ನಿರ್ಮಾಣ ಕಾರ್ಯವನ್ನು ತೀವ್ರಗತಿಯಲ್ಲಿ ಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸೇತುವೆ ನಿರ್ಮಾಣ ಕಾರ್ಯ ಶೀಘ್ರವೇ ಆರಂಭವಾಗುವ ವಿಶ್ವಾಸವಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸದ್ಯಕ್ಕೆ ಬೇಕಾಗುವ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರ ಪ್ರವಾಹ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ. ನಡುಗಡ್ಡೆ ಗ್ರಾಮಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಬದ್ಧವಾಗಿದೆ. ಈಗಾಗಲೇ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಸಂತ್ರಸ್ತರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವೆ. ಸಂತ್ರಸ್ತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಡಿವೈಎಸ್‌ಪಿ ಜಿ.ಹರೀಶ, ತಹಶೀಲ್ದಾರ್‌ ಚಾಮರಾಜ ಪಾಟೀಲ, ತಾಪಂ ಇಒ ಪ್ರಕಾಶ, ಸಿಪಿಐ ಯಶವಂತ ಬಿಸನಳ್ಳಿ ಹಾಗೂ ಮುಖಂಡರಾದ ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ನಾಗಪ್ಪ ವಜ್ಜಲ್, ಡಾ| ಶಿವಬಸಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next