ಲಿಂಗಸುಗೂರು: ರಾಜ್ಯದಲ್ಲಿ ನೂತನವಾಗಿ 100 ಹಾಸ್ಟೇಲ್‌ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ 482 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಸ್ಥಳೀಯ ಪುರಸಭೆ ವ್ಯಾಪ್ತಿಯ ಕರಡಕಲ್ ಹೊರವಲಯದಲ್ಲಿ ಹಾಗೂ ತಾಲೂಕಿನ ಈಚನಾಳ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಿದ ವಸತಿ ನಿಲಯ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 824 ವಸತಿ ಶಾಲೆಗಳಿವೆ. 2,633 ಹಾಸ್ಟೇಲ್‌ಗಳನ್ನು ನಡೆಸಲಾಗುತ್ತಿದೆ. ಒಟ್ಟು 3.71 ಲಕ್ಷ ವಿದ್ಯಾರ್ಥಿಗಳು ಹಾಸ್ಟೇಲ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಖಾಸಗಿ ಕಟ್ಟಡಗಳಲ್ಲಿ ಹಾಸ್ಟೇಲ್‌ಗಳಿಗೆ ಸ್ವಂತ ಕಟ್ಟಡಕ್ಕಾಗಿ 500 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಗಾಗಿ 30,440 ಕೋಟಿ ರೂ.ಗಳ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಶೇ.24ರಷ್ಟು ಬಜೆಟ್ ಸಮಾಜಕಲ್ಯಾಣ ಇಲಾಖೆಗೆ ಮೀಸಲಾಗಿದೆ. ಎಸ್‌ಸಿ, ಎಸ್‌ಟಿ ಸಮಾಜದ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ದೀನ, ದಲಿತರ, ಬಡವರ ಏಳ್ಗೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ಎಸ್.ಹೂಲಗೇರಿ ಮಾತನಾಡಿ, ದೇಶಕ್ಕೆ ಚಿನ್ನ ಕೊಡುವ ತಾಲೂಕು ಆಗಿದ್ದರೂ ಕೂಡಾ ಇಲ್ಲಿ ಮೂಲ ಸೌಕರ್ಯ ಕೊರತೆ ಇದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ರಾಯಚೂರು ರಸ್ತೆ ಸಂಪೂರ್ಣ ಹಾಳಾಗಿದ್ದು, ಅದನ್ನು ಅಭಿವೃದ್ಧಿಪಡಿಸಬೇಕು. ಕ್ಷೇತ್ರದಲ್ಲಿ ನಾನಾ ಭವನಗಳ ನಿರ್ಮಾಣಕ್ಕಾಗಿ ಅನುದಾನ ಒದಗಿಸುವಂತೆ ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸನಗೌಡ ಕಂಬಳಿ, ಜಿಪಂ ಸದಸ್ಯ ಸಂಗಣ್ಣ ದೇಸಾಯಿ, ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಸಹಾಯಕ ಆಯುಕ್ತ ಡಾ| ದಿಲೀಶ್ ಶಶಿ, ಸಮಾಜ ಕಲ್ಯಾಣ ಉಪನಿರ್ದೇಶಕ ಸುಬ್ರಮಣ್ಯಂ, ತಹಶೀಲ್ದಾರ್ ಚಾಮರಾಜ ಪಾಟೀಲ್, ಎಡಿ ರವಿಕುಮಾರ ಇತರರು ಇದ್ದರು.