ಬೆಂಗಳೂರು: ಮುಂಬರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಆರಂಭಿಸಿದ್ದು ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗಿದೆ. ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರವಾಗಿ ಗಂಭೀರ ಚರ್ಚೆ ನಡೆದಿರುವ ಜತೆಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಉಸ್ತುವಾರಿಗಳ ನೇಮಕವೂ ನಡೆದಿದೆ.
ಬಿಜೆಪಿ ಬಲ್ಲಮೂಲಗಳ ಪ್ರಕಾರ ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಬಂದಿರುವ ಹಾಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದಕ್ಕೆ ಬಿಜೆಪಿಯ ಕೆಲವರಿಂದ ವಿರೋಧವೂ ವ್ಯಕ್ತವಾಗಿದೆ ಎಂದೂ ಹೇಳಲಾಗುತ್ತಿದೆ.
ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದಗೌಡ ಹಾಗೂ ಮಂಜುನಾಥಗೌಡರ ಹೆಸರು ಕೇಳಿ ಬಂದಿದ್ದು, ಅಂತಿಮ ಆಯ್ಕೆಗೆ ಸಂಬಂಧಿಸಿದಂತೆ ಸಂಸದ ಸಿದ್ದೇಶ್ವರ ಅವರೂ ತಮ್ಮ ಸಂಬಂಧಿಕರಲ್ಲಿ ಒಬ್ಬರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ.ಶಂಕನೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶಿಲ್ ನಮೋಶಿ ಅವರ ಹೆಸರನ್ನು ಈಗಾಗಲೇ ಕೇಂದ್ರ ಸಮಿತಿಗೆ ಕಳುಹಿಸಿಕೊಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಉಸ್ತುವಾರಿ ನೇಮಕ: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ ಅವರು ಉಸ್ತುವಾರಿಯಾಗಿದ್ದು, ಅವರ ಜತೆ ಸಚಿವರಾದ ಡಾ.ಅಶ್ವತ್ಥನಾರಾಯಣ, ವಿ.ಸೋಮಣ್ಣ ಮತ್ತು ಆರ್.ಅಶೋಕ್ ಇರುತ್ತಾರೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಉಸ್ತುವಾರಿ ಯಾಗಿದ್ದು, ಸಚಿವರಾದ ಸಿ.ಸಿ.ಪಾಟೀಲ್, ಶಿವರಾಮ್ ಹೆಬ್ಟಾರ ಅವರೊಂದಿಗೆ ಇರಲಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಉಸ್ತುವಾರಿ ಯಾಗಿದ್ದು, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರೊಂದಿಗೆ ಇರಲಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಡಾ.ಶಿವಯೋಗಿ ಸ್ವಾಮಿ ಉಸ್ತುವಾರಿಯಾಗಿದ್ದು, ಸಚಿವರಾದ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರೊಂದಿಗೆ ಇರಲಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಿದ್ದೇವೆ. ಅಲ್ಲಿಂದಲೇ ಅಂತಿಮವಾದ ಹೆಸರು ಘೋಷಿಸಲು ಸಾಧ್ಯ. ಹೀಗಾಗಿ ಈಗ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ.
-ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ