ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶನಿವಾರ ನಗರಕ್ಕೆ ಆಗಮಿಸಲಿದ್ದು ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.
ಕಳೆದ ಎರಡು ದಿನಗಳಿಂದ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶುಕ್ರವಾರವೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜತೆ ದೂರವಾಣಿ ಮೂಲಕ ಚರ್ಚಿಸಿ ಅಂತಿಮಗೊಳಿಸಲು ನಿರ್ಧರಿಸಿದ್ದರು. ಆದರೆ, ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದೂಡಲಾಯಿತು.
ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ದಿ. ಸಿ.ಎಸ್. ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದು, ಧಾರವಾಡ ಜಿಲ್ಲಾ ಘಟಕವೂ ಅವರ ಪರವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರ ಹೆಸರನ್ನೇ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ನಡುವೆ ಕೆಲವು ಆಕಾಂಕ್ಷಿಗಳು ಟಿಕೆಟ್ ಪಡೆಯಲು ಕಸರತ್ತು ಮುಂದುವರಿಸಿದ್ದಾರೆ. ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಸುರೇಶ್ ಸವಣೂರು ಬಿ. ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಎಂದು ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಅಲ್ಲದೇ ಶಿವಾನಂದ ಬೆಂಥೂರ್ ಅವರೂ ಕೂಡ ಟಿಕೆಟ್ ಪಡೆಯಲು ಕಸರತ್ತು ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಗೊಂದಲದ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅವರೂ ಕುಸುಮಾ ಶಿವಳ್ಳಿ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಚಿಂಚೋಳಿ ಕ್ಷೇತ್ರದಲ್ಲಿಯೂ ಟಿಕೆಟ್‌ಗೆ ಪೈಪೋಟಿ ಜೋರಾಗಿದ್ದು, ಮಾಜಿ ಸಚಿವ ಬಾಬುರಾವ್ ಚೌಹಾಣ್, ಸುಭಾಷ್ ರಾಠೊಡ್ ಹಾಗೂ ಬಾಬು ಹೊನ್ನಾನಾಯಕ್ ನಡುವೆ ತೀವ್ರ ಪೈಪೋಟಿ ಇದ್ದು, ಸುಭಾಷ್ ರಾಠೊಡ್ ಹಾಗೂ ಬಾಬುರಾವ್ ಚೌಹಾಣ್ ಹಾಗೂ ಬಾಬು ಹೊನ್ನಾನಾಯಕ್ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಭೇಟಿ ಮಾಡಿ ಟಿಕೆಟ್‌ಗೆ ಮನವಿ ಮಾಡಿದ್ದಾರೆ. ಆ ನಂತರ ಪ್ರಿಯಾಂಕ್ ಖರ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.