ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕುರಿತಂತೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರ ಪಟ್ಟಿ ಸಿದ್ಧಪಡಿಸಲಾಗಿದ್ದು, ಮತ್ತೂಂದು ಸುತ್ತಿನ ಸಭೆಯಲ್ಲಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ.
ಸಾಹಿತ್ಯ, ರಂಗಭೂಮಿ, ಸಂಗೀತ, ಯಕ್ಷಗಾನ, ಚಲನಚಿತ್ರ, ವಿಜ್ಞಾನ, ಶಿಲ್ಪಕಲೆ, ಕೃಷಿ, ಪತ್ರಿಕೋದ್ಯಮ, ವೈದ್ಯಕೀಯ ಸೇರಿ ಸುಮಾರು 23 ಕ್ಷೇತ್ರಗಳ ಒಟ್ಟು 62 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸಲಹಾ ಸಮಿತಿಯು ಸುಮಾರು 161 ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿದೆ. ಮಂಗಳವಾರದ ಸಭೆಯಲ್ಲಿ 75 ರಿಂದ 80 ಜನರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಶೇ.50 ಸಾಧಕರ ಹೆಸರು ಅಂತಿಮಗೊಂಡ ನಂತರ ಸಭೆಯಿಂದ ನಿರ್ಗಮಿಸಿದರು. ಉಳಿದಂತೆ ಸಚಿವೆ ಉಮಾಶ್ರೀ ನೇತೃತ್ವದಲ್ಲಿ ಪಟ್ಟಿ ಸಿದ್ಧಪಡಿಸಲಾಯಿತು. ಮತ್ತೂಮ್ಮೆ ಮುಖ್ಯಮಂತ್ರಿಯವರ ಅವಗಾಹನೆಗೆ ತಂದ ಬಳಿಕ ಶೀಘ್ರವೇ ಅಂತಿಮ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ವಾರ್ತಾ ಸಚಿವ ರೋಷನ್‌ಬೇಗ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಸೇರಿ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಉಪಸ್ಥಿತರಿದ್ದರು.
ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಚಿನ್ನದ ಪ್ರಮಾಣವನ್ನೂ ಹೆಚ್ಚಿಸುವ ಪ್ರಸ್ತಾವನೆ ಇಲ್ಲ. ಒಟ್ಟು 1,750ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, 161ಕ್ಕೆ ಪರಿಷ್ಕರಣೆ ಮಾಡಿದ್ದು, ಆ ಪೈಕಿ 62 ಮಂದಿಯ ಪಟ್ಟಿ ಅಂತಿಮಗೊಳ್ಳಲಿದೆ.
-ಉಮಾಶ್ರೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ