Advertisement

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಆಗ್ರಹ

09:32 PM Jul 09, 2019 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನಾ ಧರಣಿ ನಡೆಸಿದರು.

Advertisement

ಕಚೇರಿ ಮುಂದೆ ಧರಣಿ: ಜಿಲ್ಲೆಯ ವಿವಿಧ ತಾಲೂಕುಗಳಿಂದ ಪ್ರಾಥಮಿಕ ಶಾಲೆಗಳನ್ನು ಬಂದ್‌ಗೊಳಿಸಿ ಪ್ರತಿಭಟನೆಗೆ ಆಗಮಿಸಿದ್ದ ಸಾವಿರಾರು ಪ್ರಾಥಮಿಕ ಶಾಲಾ ಶಿಕ್ಷಕರು, ನಗರದ ಜೂನಿಯರ್‌ ಕಾಲೇಜು ಆವರಣದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಹಲವು ಬೇಡಿಕೆ: ವರ್ಷದಿಂದ ವರ್ಷಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿರುವುದರಿಂದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು.

ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕೆಂದು ಪ್ರತಿಭಟನಾನಿರತ ಶಿಕ್ಷಕರು ಆಗ್ರಹಿಸಿದರು. ಆರನೇ ವೇತನ ಆಯೋಗದ ಆಂತಿಮ ವರದಿಯ ಶಿಫಾರಸು ಪ್ರಕಾರ ಮುಖ್ಯ ಶಿಕ್ಷಕರಿಗೆ 10,15, 20, 25, 30 ವರ್ಷದ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡಬೇಕೆಂದರು.

ಪ್ರಯೋಜನವಾಗಿಲ್ಲ: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ ಮಾತನಾಡಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳನ್ನು ಬಂದ್‌ ಮಾಡಿ ಹೋರಾಟ ನಡೆಸಲಾಗುತ್ತಿದೆ ಎಂದರು. ಸರ್ಕಾರ ಕೂಡಲೇ ಗ್ರಾಮೀಣ ಕೃಪಾಂಕ ಶಿಕ್ಷಕರ ಹಾಗೂ ನೌಕರರ ಸಮಸ್ಯೆಗಳನ್ನು ನಿವಾರಿಸಬೇಕೆಂದರು.

Advertisement

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರವಣಪ್ಪ, ಸಹ ಕಾರ್ಯದರ್ಶಿ ವೆಂಕಟೇಶಪ್ಪ. ಉಪಾಧ್ಯಕ್ಷೆ ಪ್ರಭಾವತಮ್ಮ, ಸಹ ಕಾರ್ಯದರ್ಶಿ ಶೈಲಜಾ, ಜಿಲ್ಲಾ ಖಜಾಂಚಿ ಕೆ.ಸಿ.ಶಿವಶಂಕರ್‌, ಸಂಘಟನಾ ಕಾರ್ಯದರ್ಶಿ ಅಂಬಿಕಾ, ರಾಮಚಂದ್ರ, ಚಿಂತಾಮಣಿ ತಾಲೂಕು ಅಧ್ಯಕ್ಷ ಆರ್‌.ಅಶೋಕ್‌ ಕುಮಾರ್‌, ಗೌರಿಬಿದನೂರು ತಾ.ಅಧ್ಯಕ್ಷ ಸಿದ್ದರಾಮಯ್ಯ, ಬಾಗೇಪಲ್ಲಿ ತಾ.ಅಧ್ಯಕ್ಷ ವೆಂಕಟರವಣಪ್ಪ, ಶಿಡ್ಲಘಟ್ಟ ತಾ.ಅಧ್ಯಕ್ಷ ಸಿ.ಎಂ.ಮುನಿರಾಜು, ಚಿಕ್ಕಬಳ್ಳಾಪುರ ತಾ.ಅಧ್ಯಕ್ಷ ರಾಮಶೇಷಪ್ಪ, ಗುಡಿಬಂಡೆ ತಾ.ಅಧ್ಯಕ್ಷ ಬಾಲಾಜಿ, ಚಿಂತಾಮಣಿಯ ಕೆ.ವಿ.ಚೌಡಪ್ಪ ಸೇರಿದಂತೆ ನೂರಾರು ಶಿಕ್ಷಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next