ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ತರಗತಿಯ(ಎಲ್‌ಕೆಜಿ, ಯುಕೆಜಿ) ಹಾಗೂ ಪಿಯು ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದಲೇ ಸಿಗಲಿದೆ ಪೌಷ್ಠಿಕಾಂಶಯುಕ್ತ ಬಿಸಿಯೂಟ! ಸರ್ಕಾರಿ ಶಾಲೆಯ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಹಾಗೂ ಹಾಲು ನೀಡಲಾಗುತ್ತಿದೆ. ಇದನ್ನು ಕರ್ನಾಟಕ ಪಬ್ಲಿಕ್ ಶಾಲೆಗೂ ವಿಸ್ತರಿಸಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಂದಿನಂತೆ ಬಿಸಿಯೂಟ ದೊರೆಯಲಿದೆ. ಈಗ ಹೊಸದಾಗಿ ಸೇರ್ಪಡೆಯಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಿಗೆ ಬಿಸಿಯೂಟ ವ್ಯವಸ್ಥೆ ಮಾಡಲಾಗುತ್ತಿದೆ.
ಸರ್ಕಾರಕ್ಕೆ ಪ್ರಸ್ತಾವನೆ: ರಾಜ್ಯದ 276 ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ತಲಾ 30ರಂತೆ 8280 ಮಕ್ಕಳನ್ನು ಪೂರ್ವ ಪ್ರಾಥಮಿಕ ತರಗತಿಗಳಿಗೆ ದಾಖಲಿಸಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ. ಅದರಂತೆ, ಆ ಎಲ್ಲ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ, ಹಾಲು ಹಾಗೂ ಪೌಷ್ಠಿಕಾಂಶಯುಕ್ತ ಬಿಸ್ಕೆಟ್ ನೀಡಲು ಬೇಕಾದ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನದ ಬಿಸಿಯೂಟ ವಿಭಾಗದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಪ್ರಸ್ತಾವನೆ ಬಂದ ನಂತರ ಬಿಸಿಯೂಟ ವಿತರಣಾ ಕಾರ್ಯ ಆರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯಿಂದ ಮಾಹಿತಿ: ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಎಷ್ಟು ಪ್ರಮಾಣದ ಊಟ, ಹಾಲು ನೀಡಬೇಕು ಎಂಬುದರ ಕುರಿತು ಆರೋಗ್ಯ ಇಲಾಖೆಗೂ ಪತ್ರ ಬರೆಯಲಾಗಿದೆ. ಆರೋಗ್ಯ ಇಲಾಖೆಯ ನಿರ್ದೇಶನದಂತೆ ಮಕ್ಕಳಿಗೆ ಬಿಸಿಯೂಟ, ಹಾಲು ಹಾಗೂ ಪೌಷ್ಠಿಕಾಂಶಯುಕ್ತ ಬಿಸ್ಕೆಟ್ ಒದಗಿಸಲಾಗುತ್ತದೆ. ಇದರ ಜತೆಗೆ ಅಂಗನವಾಡಿ ಮಕ್ಕಳಿಗೆ ನೀಡುತ್ತಿರುವ ಪೌಷ್ಠಿಕಾಂಶಯುಕ್ತ ಆಹಾರದಲ್ಲಿ ಕೆಲವು ಪದಾರ್ಥವನ್ನು ಸರ್ಕಾರಿ ಶಾಲೆಯ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ನೀಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಯುತ್ತಿದೆ. ಆದರೆ, ಈ ಬಗ್ಗೆ ಆರೋಗ್ಯ ಇಲಾಖೆಯ ಅನುಮತಿ ಅಗತ್ಯವಿದೆ ಎಂದು ವಿವರ ನೀಡಿದರು.
ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲು ಅನುಮೋದನೆ ನೀಡಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಹಾಲು ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಷ್ಟು ಮಂದಿ ಪಿಯುಸಿ ವಿದ್ಯಾರ್ಥಿಗಳಿದ್ದಾರೆ ಎಂಬ ಮಾಹಿತಿಯನ್ನು ಇಲಾಖೆ ಕಲೆಹಾಕುತ್ತಿದೆ.
ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಇರುವುದಿಲ್ಲ. 2018-19ನೇ ಸಾಲಿನಲ್ಲಿ ಸರ್ಕಾರಿ ಶಾಲೆಯ 1 ರಿಂದ 10ನೇ ತರಗತಿಯ 53.50 ಲಕ್ಷ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗಿದೆ. ಈ ವರ್ಷ 54ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಸರ್ಕಾರದಿಂದ ಸಿಗಲಿದೆ ಎಂದು ಅಂದಾಜಿಸಲಾಗಿದೆ.
ಶಾಲೆಯಲ್ಲೇ ಗಾರ್ಡನ್: ಶಾಲೆಯಲ್ಲಿ ಅಡುಗೆಗೆ ಬೇಕಾದ ತರಕಾರಿಗಳನ್ನು ಬೆಳೆಸುವ ನಿಟ್ಟಿನಲ್ಲಿ ಕೈತೋಟ ಆರಂಭಿಸುವ ಸಲುವಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ವರದಿ ಕೇಳಿತ್ತು. ಅದರಂತೆ ಸುಮಾರು 30515 ಸಾವಿರ ಸರ್ಕಾರಿ ಶಾಲೆಯಲ್ಲಿ ರೀತಿ ವ್ಯವಸ್ಥೆ ಮಾಡಿಕೊಳ್ಳಬಹುದು ಎಂಬ ವರದಿಯನ್ನು ಸಲ್ಲಿಸಲಾಗಿದೆ. ಅನುಮೋದನೆ ಕೂಡ ಸಿಕ್ಕಿದೆ. ಆದರೆ, ಅನುದಾನ ಬಿಡುಗಡೆಯಾಗಿಲ್ಲ. ಪ್ರತಿ ಶಾಲೆಗೆ 5 ಸಾವಿರ ಅನುದಾನ ಬರುವ ಸಾಧ್ಯತೆ ಇದೆ. ಅನುದಾನ ಬಂದ ನಂತರ ಕೈತೋಟದ ಕಾರ್ಯ ಆರಂಭಿಸಲಿದ್ದೇವೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.
276 ಕರ್ನಾಟಕ ಪಬ್ಲಿಕ್ ಶಾಲೆಯ ಪಿಯು ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಬಿಸಿಯೂಟ ನೀಡಲು ಅವಕಾಶ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸರ್ಕಾರ ಅನುಮೋದನೆ ನೀಡಿದ ತಕ್ಷಣವೇ ಬಿಸಿಯೂಟ ವ್ಯವಸ್ಥೆ ಮಾಡುತ್ತೇವೆ.
-ಎಂ.ಆರ್.ಮಾರುತಿ, ಸಹ ನಿರ್ದೇಶಕ, ಮಾಧ್ಯಾಹ್ನ ಬಿಸಿಯೂಟ ಯೋಜನೆ
* ರಾಜು ಖಾರ್ವಿ ಕೊಡೇರಿ