ಶಿಡ್ಲಘಟ್ಟ: ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರೈತ ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು, ರೈತರು ತಾಲೂಕಿನ ದಿಬ್ಬೂರಹಳ್ಳಿ – ಚಿಂತಾಮಣಿ ರಸ್ತೆಯಲ್ಲಿ ದಿಢೀರ್ ರಸ್ತೆ ನಡೆಸಿದರು.
ತಾಲೂಕಿನ ದಿಬ್ಬೂರಹಳ್ಳಿ ಠಾಣೆ ವ್ಯಾಪ್ತಿಯ ಕುದುಪಕುಂಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಅದೇ ಗ್ರಾಮದ ಮುನಿಸ್ವಾಮಿ ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಬೇಕು, ಗುಂಡಿ ಬಿದ್ದ ರಸ್ತೆ ದುರಸ್ತಿ ಮಾಡಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಪುರಬೈರೇನಹಳ್ಳಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು, ಈ ಅಪಘಾತ ನಡೆದಿದೆ. ಹಾಗಾಗಿ, ಅಕ್ರಮ ಗಣಿಗಾರಿಕೆ ಕೂಡಲೇ ನಿಲ್ಲಿಸಬೇಕು, ಅಕ್ರಮ ಗಣಿಗಾರಿಕೆ ತಡೆಗಟ್ಟಲು ವಿಫಲವಾಗಿರುವ ದಿಬ್ಬೂರಹಳ್ಳಿ ಠಾಣೆಯ ಎಸ್‌ಐ ಪಾಪಣ್ಣ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವುದರಿಂದಲೇ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು, ಈ ರಸ್ತೆಯನ್ನು ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರಿಂದಲೂ ಪರಿಹಾರ ಕೊಡಿಸಬೇಕೆಂದು ಪ್ರತಿಭಟನೆ ನಡೆಸಲಾಯಿತು.
ಪರಿಹಾರ ಕೊಡಿಸುವ ಭರವಸೆ: ಮೃತರ ಕುಟುಂಬದವರು, ರೈತ ಸಂಘದ ಪುಟ್ಟಣ್ಣಯ್ಯ ಬಣದ ಸದಸ್ಯರು, ಸ್ಥಳೀಯರು ಪ್ರತಿಭಟನೆ ನಡೆಸಿದರು. ಡೀಸಿ, ಎಸ್ಪಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ತಹಶೀಲ್ದಾರ್ ಬಿ.ಎಸ್.ರಾಜೀವ್, ಸರ್ಕಲ್ ಇನ್ಸ್‌ಪೆಕ್ಟರ್ ಧಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರು.
ಅಕ್ರಮ ಗಣಿಗಾರಿಕೆ ಯನ್ನು ಕ್ಷಣದಿಂದಲೇ ನಿಲ್ಲಿಸಲಾಗುವುದು, ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರು, ಸರ್ಕಾರದಿಂದ ಸಿಗುವ ಪರಿಹಾರ ಕೊಡಿಸುವುದಾಗಿ ತಹಶೀಲ್ದಾರ್ ಭರವಸೆ ನೀಡಿದರು. ಇನ್ನು ಎಸ್‌ಐ ಪಾಪಣ್ಣ ಅಮಾನತು ಕುರಿತು ಸರ್ಕಲ್ ಇನ್ಸ್‌ಪೆಕ್ಟರ್ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ಅಭಯ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಟಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ಮಂಜುನಾಥ್, ಮೃತ ಕುಟುಂಬ ಸದಸ್ಯರು, ಸ್ಥಳೀಯರು ಭಾಗವಹಿಸಿದ್ದರು