ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ರಾಜ್ಯ ಸರಕಾರದ ನಿರ್ದೇಶನದಂತೆ ಜೂ. 7ರ ವರೆಗೆ ಜಾರಿಗೊಳಿಸಿದ್ದ ಲಾಕ್‌ಡೌನ್‌ನ್ನು ಜೂ. 14ರವರೆಗೆ ಮುಂದುವರಿಸಲಾಗಿದೆ. ಈ ಅವಧಿ ಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನೇ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದ್ದಾರೆ.
ಯಾವ್ಯಾವ ಚಟುವಟಿಕೆಗೆ ಅವಕಾಶ: ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿ ಸಿದ ಚಟುವಟಿಕೆಗಳು, ಆಹಾರ ಸಾಮಗ್ರಿ, ದಿನಸಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು, ಹಾಲಿನ ಬೂತ್, ಮದ್ಯ ಮಾರಾಟ ಮಳಿಗೆಗಳು, ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳು, ಪಾರ್ಸೆಲ್ ಹಾಗೂ ಹೋಂ ಡಿಲೆವರಿ ಸೇವೆಗಳು ಕೇವಲ ಪಾರ್ಸೆಲ್ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6ರಿಂದ 12 ಗಂಟೆವರೆಗೆ ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ಖರೀದಿಗಾಗಿ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ತಳ್ಳುಗಾಡಿ, ಆಟೋ, ಟಂಟಂಗಳಲ್ಲಿ ಬೀದಿ ಸುತ್ತುವ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ. ತುರ್ತು ಸಂದರ್ಭಗಳಲ್ಲಿ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರ ಮತ್ತು ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿಗೆ ಅನುಮತಿ ನೀಡಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ. ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ದೂರ ಸಂಪರ್ಕ, ಇಂಟರ್ ನೆಟ್, ಪ್ರಸಾರ ಮತ್ತು ಕೆಬಲ್ ಸೇವೆಗಳು, ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ, ಇತರೆ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು.
ಸ್ಥಳದಲ್ಲಿಯೇ ಕಾರ್ಮಿಕರು, ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು, ಉತ್ಪಾದನಾ ಘಟಕಗಳು, ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆ ಹಾಗೂ ರಸ್ತೆ ಕಾಮಗಾರಿ, ಅಗತ್ಯ ವಸ್ತುಗಳ ತಯಾರಿಕಾ ಘಟಕ, ನ್ಯಾಯಬೆಲೆ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಮತ್ತು ಮದುವೆ ಸಮಾರಂಭಗಳಲ್ಲಿ ಗರಿಷ್ಠ 40 ಜನರು ಪಾಲ್ಗೊಳ್ಳಲು ಷರತ್ತು ವಿಧಿಸಿದೆ.
ಅವಕಾಶವಿಲ್ಲ: ಬಸ್, ರೈಲು ಸಂಚಾರ, ಶಾಲೆ, ಕಾಲೇಜುಗಳು, ಕೋಚಿಂಗ್ ಸಂಸ್ಥೆಗಳ ತರಗತಿಗಳು, ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಕ್ರೀಡಾ ಸಂಕೀರ್ಣ, ಕ್ರೀಡಾಂಗಣ, ಈಜುಗೊಳ, ಉದ್ಯಾನವನ, ಮನರಂಜನಾ ಪಾರ್ಕ್, ಕ್ಲಬ್, ಥಿಯೇಟರ್, ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ. ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳ ನಿಷೇಧ, ಎಲ್ಲ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ, ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿಷೇಧ (ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ) ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು ಹಾಗೂ ಇತರ ಪ್ರಯಾಣಿಕ ವಾಹನಗಳ ಸಂಚಾರವನ್ನು ನಿಷೇಧಿಸಿದೆ.