ಹುಬ್ಬಳ್ಳಿ: ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಜು. 7ರ ನಂತರ ಲಾಕ್‌ಡೌನ್ ಮಾಡಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರ. ಅಂದಿನ ಬೆಳವಣಿಗೆಗಳನ್ನು ಇಂದು ಊಹಿಸುವುದು ಕಷ್ಟ. ಅಂದಿನ ಪರಿಸ್ಥಿತಿ ನೋಡಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಕ್ಕೊಂದು ದಿನ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಪ್ರತಿ ಶನಿವಾರ ಸರಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ಲಾಕ್‌ಡೌನ್ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಇನ್ನಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಸರಕಾರ ಚೀನಾ ಆ್ಯಪ್‌ಗ್ಳನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿರುವುದು ಒಳ್ಳೆಯ ಬೆಳವಣಿಗೆ. ಇದಕ್ಕೆ ಪರ್ಯಾಯವಾಗಿ ದೇಶಿ ನಿರ್ಮಿತ ಆ್ಯಪ್‌ಗ್ಳು ಸಿದ್ಧವಾಗಬೇಕಿದೆ. ಕೆಲ ಆ್ಯಪ್‌ಗ್ಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಬಳಕೆಗೆ ಜನರು ಮುಂದಾಗಬೇಕು. ಹೊಸ ಆ್ಯಪ್ ಸಿದ್ಧಪಡಿಸಲು ನವೋದ್ಯಮಿಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸಿಗೆ ವ್ಯವಸ್ಥೆ ಮೀಸಲಿಡುವ ಕುರಿತು ಖಾಸಗಿ ಆಸ್ಪತ್ರೆಯವರೊಂದಿಗೆ ಚರ್ಚಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ಒಂದಿಷ್ಟು ಹಾಸಿಗೆ ಇದಕ್ಕಾಗಿ ಮೀಸಲಿಡುವುದಾಗಿ ಭರವಸೆ ನೀಡಿದ್ದಾರೆ. ಅವರ ಕೆಲ ತಾಂತ್ರಿಕ ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದು ಎಲ್ಲರ ಕರ್ತವ್ಯ ಎಂದು ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.