ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್‌ನ ಹೈಕಮಾಂಡ್ ರಾಷ್ಟ್ರ ರಾಜಕಾರಣಕ್ಕೆ ಕರೆದು ಕೊಳ್ಳಲಿದ್ದು, 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಲಿದ್ದಾರೆಂಬ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲೆ, ಜಿಲ್ಲೆಯ ಕಾಂಗ್ರೆಸ್‌ನ ಒಂದು ಗುಂಪು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅವರನ್ನು ಕರೆ ತರುವ ಸಾಹಸಕ್ಕೆ ಕೈ ಹಾಕಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾಲಿ ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಜಿಲ್ಲೆಯ ಕಾಂಗ್ರೆಸ್‌ನ ಕೆಲ ಹಾಲಿ, ಮಾಜಿ ಶಾಸಕರ ಗುಂಪು ಇಂತಹದ್ದೊಂದು ಪ್ರಯತ್ನಕ್ಕೆ ಕೈ ಹಾಕಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬಿಜೆಪಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು 2019ರ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ.
ಈ ಮಧ್ಯೆ, 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ ತೋರುವಲ್ಲಿ ವಿಫಲವಾಗಿದೆ. ಹೀಗಾಗಿ, 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶ ಕಾಂಗ್ರೆಸ್‌ನದು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನವರಂತಹ ಪ್ರಭಾವಿ ನಾಯಕರನ್ನು ರಾಷ್ಟ್ರ ರಾಜಕಾರಣಕ್ಕೆ ಬಳಸಿಕೊಳ್ಳುವ ಉತ್ಸಾಹದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ಇದ್ದಾರೆಂಬ ಮಾತು ಕೇಳಿ ಬರುತ್ತಿದೆ.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಕಾಂಗ್ರೆಸ್ ಪಾಲಿಗೆ ಭದ್ರಕೋಟೆಯಾಗಿದ್ದು, ದಶಕಗಳಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ.
ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರುವ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪಾರುಪತ್ಯ ಮೆರೆದಿರುವುದರಿಂದ, ಜತೆಗೆ ಕ್ಷೇತ್ರದಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತಗಳೇ ಪ್ರತಿ ಚುನಾವಣೆಯಲ್ಲಿ ನಿರ್ಣಾಯಕವಾಗಿರುವುದರಿಂದ ಸಿದ್ದರಾಮಯ್ಯನವರನ್ನು ಈ ಕ್ಷೇತ್ರಕ್ಕೆ ಕರೆ ತರುವ ಪ್ರಯತ್ನಕ್ಕೆಜಿಲ್ಲೆಯ ಕೆಲ ಕಾಂಗ್ರೆಸ್ ಶಾಸಕರು ಸಾಕಷ್ಟು ಉತ್ಸಾಹ ತೋರುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಿಲ್ಲಿಸಿದರೆ ಗೆಲುವು ಸುಲಭವೆಂಬ ಲೆಕ್ಕಾಚಾರ ಇದರ ಹಿಂದಿದೆ ಎಂದು ತಿಳಿದು ಬಂದಿದೆ.
ಜಿಲ್ಲಾ ಕಾಂಗ್ರೆಸ್‌ನ ಒಂದು ಗುಂಪು ಅವರನ್ನು ಸಂಪರ್ಕಿಸಿದ್ದು, ಇಂತಹ ಪ್ರಸ್ತಾಪವನ್ನು ಅವರ ಮುಂದೆ ಇಟ್ಟಿದ್ದಾರೆಂದು ಕಾಂಗ್ರೆಸ್‌ನ ವಿಶ್ವಸನೀಯ ಮೂಲಗಳು “ಉದಯವಾಣಿ’ಗೆ ಮಾಹಿತಿ ನೀಡಿವೆ.
ಸ್ಥಳೀಯ ಕೈ ಬಣದ ತೀವ್ರ ಪ್ರಯತ್ನ
2009ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ
ಮೊಯ್ಲಿ, ಸತತ ಎರಡು ಬಾರಿ ಗೆಲುವು ಸಾಧಿಸಿದರೂ ನಿರೀಕ್ಷಿತ ಮಟ್ಟದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸಿಲ್ಲ.
ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಹಾಗೂ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿ ದ್ದಾರೆಂಬ ಆರೋಪ ಅವರ ವಿರುದ್ಧ ಪ್ರಬಲವಾಗಿ ಕೇಳಿ ಬರುತ್ತಿದೆ. ಹೀಗಾಗಿ, ಮೊಯ್ಲಿ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಜಿಲ್ಲಾ ಕಾಂಗ್ರೆಸ್‌ನ ಒಂದು ಬಣ ಸಿದ್ದರಾಮಯ್ಯನವರನ್ನು ಕರೆ ತರುವ ಪ್ರಯತ್ನಕ್ಕೆ ಕೈಹಾಕಿದೆ. ಇದರ ನೇತೃತ್ವವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಜಿಲ್ಲೆಯ ಕೆಲ ಹಾಲಿ, ಮಾಜಿ ಶಾಸಕರು ವಹಿಸಿದ್ದಾರೆಂದು ತಿಳಿದು ಬಂದಿದೆ.
– ಕಾಗತಿ ನಾಗರಾಜಪ್ಪ