Advertisement

ಅವಧಿಗೆ ಮುನ್ನವೇ ಲೋಕಸಭೆ ಚುನಾವಣೆ?

06:00 AM Jun 29, 2018 | Team Udayavani |

ನವದೆಹಲಿ/ಬೆಂಗಳೂರು: ಇದೇ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

Advertisement

ದೆಹಲಿ ಪ್ರವಾಸದಲ್ಲಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸಿದ್ಧತೆಗಳನ್ನು ನೋಡಿದರೆ, ಈ ರೀತಿಯ ಅನುಮಾನ ಕಾಣುತ್ತಿದೆ ಎಂದು ಹೇಳಿದ್ದಾರೆ. ಜತೆಗೆ, ಶೀಘ್ರದಲ್ಲೇ ತೃತೀಯ ರಂಗ ಕಟ್ಟಿಕೊಳ್ಳಬೇಕಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವರ್ಷಾಂತ್ಯದಲ್ಲಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಜತೆಗೇ ಲೋಕಸಭೆ ಚುನಾವಣೆಯೂ ನಡೆಯಬಹುದು. ಮುಂಗಾರು ಅಧಿವೇಶನವೇ ಪ್ರಸಕ್ತ ಸಂಸತ್ತಿನ ಕಡೆಯ ಅಧಿವೇಶನವಾದರೂ ಅಚ್ಚರಿಯಿಲ್ಲ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದಿದ್ದ ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬುದು ಸರಿಯಲ್ಲ. ಮೈತ್ರಿ ಏನಿದ್ದರೂ ಆಯಾ ರಾಜ್ಯಗಳ ಲೆಕ್ಕಾಚಾರಗಳಿಗೆ ಅನುಗುಣವಾಗಿ ನಿರ್ಧಾರವಾಗುತ್ತದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಮತ್ತು ಮಾಯಾವತಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಬಿಹಾರದಲ್ಲೂ ಬೇರೆ ರೀತಿಯ ಬೆಳವಣಿಗೆಗಳಾಗುತ್ತಿವೆ. ಈ ಎಲ್ಲದರ ನಡುವೆ ಬಹುಬೇಗನೇ ತೃತೀಯ ರಂಗ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲೂ ಬಿಎಸ್‌ಪಿ ಜತೆ ಮೈತ್ರಿ ಮುಂದುವರಿಸುತ್ತೇವೆ. ಒಂದು ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದೇವೆ. ಹಾಗೆಯೇ ಉತ್ತರ ಪ್ರದೇಶದಲ್ಲೂ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್‌ ಅಲಿ ಸ್ಪರ್ಧೆಗೆ ಅವಕಾಶ ಕೋರಲಾಗಿದೆ. ಆದರೆ, ಕಾಂಗ್ರೆಸ್‌ ಜತೆಗೆ ಸೀಟು ಹೊಂದಾಣಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ದೇವೇಗೌಡರು ತಿಳಿಸಿದರು.

Advertisement

ಎನ್‌ಡಿಎ ಹೊರತಾದ ನಾಯಕರ ಭೇಟಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಮೈತ್ರಿಕೂಟ ರಚಿಸುವ ಬಗ್ಗೆ ಪ್ರಯತ್ನ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಎನ್‌ಡಿಎ ಹೊರತಾದ ಎಲ್ಲಾ ಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದೇನೆ.  ಬಿಹಾರದಲ್ಲಿ ಆರ್‌ಜೆಡಿ ಮತ್ತು ಜೆಡಿಯು ನಾಯಕ ನಿತೀಶ್‌ಕುಮಾರ್‌ ಒಂದಾಗಲಿದ್ದಾರೆ ಎಂದು ಹೇಳಿದರು.

ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಿಸಿಕೊಳ್ಳಲು ಕೆಲವು ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಮತ್ತು ಕಾಂಗ್ರೆಸ್‌ ಜತೆ ಮೈತ್ರಿಕೂಟದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರ್ನಾಟಕದ ಮಟ್ಟಿಗೆ ಇದು ಸಾಧ್ಯವಿಲ್ಲ. ಈಗಾಗಲೇ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದು, ಅದನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸರ್ಕಾರದ ಬಗ್ಗೆ ಅನುಮಾನ ಬೇಡ
ಸಮ್ಮಿಶ್ರ ಸರ್ಕಾರ ರಚನೆ ಕುರಿತು ಮಾತುಕತೆ ಆಗಿರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ. ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮಾಡುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇವೇಗೌಡರು ಟಾಂಗ್‌ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ಮಿತ್ರ ಪಕ್ಷಗಳಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next