ಹೊಸದಿಲ್ಲಿ : ಹೊಸ ಸಂಸತ್ ಕಟ್ಟಡವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಉದ್ಘಾಟಿಸಬೇಕು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬಾರದು ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಎಪಿ, ಮತ್ತು ಸಿಪಿಐ-ಎಂ ಸೇರಿದಂತೆ ಹತ್ತೊಂಬತ್ತು ವಿರೋಧ ಪಕ್ಷಗಳು ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿರುವ ವೇಳೆ ಓವೈಸಿ ಈ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳ ಪ್ರಕಾರ, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬಾರದು ಎಂಬುದಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗಿಟ್ಟು ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ಪ್ರಧಾನಿ ಮೋದಿಯವರ ನಿರ್ಧಾರವು ಘೋರ ಅವಮಾನ ಮಾತ್ರವಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ, ಇದು ಸೂಕ್ತ ಪ್ರತಿಕ್ರಿಯೆಯನ್ನು ಬಯಸುತ್ತದೆ” ಎಂದು ವಿರೋಧ ಪಕ್ಷಗಳು ಹೇಳಿವೆ.
ರಾಷ್ಟ್ರಪತಿ ಮುರ್ಮು ಅವರಿಗೆ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲು ಹೇಳಿರುವುದನ್ನು ನಾನು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದರು.