ಮೈಸೂರು: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳವತಿಯಿಂದ ಜು.14ರಂದು ಮೈಸೂರು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ವಂಟಿಗೊಡಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ರಾಜೀಯಾಗಬಹುದಾದ ಎಲ್ಲಾ ರೀತಿಯ ಕ್ರಿಮಿನಲ್ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ಜೀವನಾಂಶ ಸಂಬಂಧಿತ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.
ಅಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನಕ್ಕಾಗಿ ಮೈಸೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ 2456 ಪ್ರಕರಣಗಳು ಹಾಗೂ 929 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಈ ಪ್ರಕರಣಗಳು ಮಾತ್ರವಲ್ಲದೇ ರಾಜೀಯಾಗಬಹುದಾದ ಇತರೆ ಪ್ರಕರಣಗಳನ್ನು ನ್ಯಾಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ ರಾಜೀ ಸಂಧಾನಕ್ಕೆ ತೆಗೆದುಕೊಳ್ಳಲಾಗುವುದು. ಯಾರಿಗಾದರೂ ಕಾನೂನಿನ ನೆರವು ಬೇಕಿದ್ದಲ್ಲಿ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರ ಇಲ್ಲವೇ ತಾಲೂಕು ಸಮಿತಿಗಳನ್ನು ಸಂಪರ್ಕಿಸಬಹುದು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ಮುಜೀರುಲ್ಲಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.