ಮೈಸೂರು: ಮುಡಾ ಹಗರಣದಲ್ಲಿ(MUDA) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದ್ದು , ಸಿಎಂ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ(ಸೆ27) ಎಫ್ ಐ ಆರ್ ದಾಖಲು ಮಾಡಿದ್ದಾರೆ.
ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಆರೋಪಿ ನಂಬರ್ 1 ಎಂದು ಹೆಸರಿಸಲಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಎರಡನೇ ಆರೋಪಿಯಾಗಿದ್ದು, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಆರೋಪಿ ನಂಬರ್ 3, ಭೂ ಮಾಲೀಕ ದೇವರಾಜು ಆರೋಪಿ ನಂಬರ್ 4 ಆಗಿ, ಇತರರು ಆರೋಪಿ ನಂಬರ್ 5 ಆಗಿ ಹೆಸರಿಸಲಾಗಿದೆ.ಲೋಕಾಯುಕ್ತ ಎಸ್ ಪಿ ಉದೇಶ್ ಅವರೇ ಖುದ್ದು ಪ್ರಕರಣ ದಾಖಲು ಮಾಡಿ ತನಿಖೆಗೆ ಇಳಿದಿದ್ದಾರೆ.
ಕೋರ್ಟ್ ನೀಡಿದ ಸೂಚನೆಯಂತೆ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ.
ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋ.ರೂ. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದ ಕ್ರಮವನ್ನು ರಾಜ್ಯ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿತ್ತು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದ್ದು ಬಂಧನ ಭೀತಿ ಎದುರಾಗಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಪುನರುಚ್ಚರಿಸುತ್ತಲೇ ಬಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜೀನಾಮೆಗೆ ಪಟ್ಟು ಹಿಡಿದಿವೆ.