ಹೊಸದಿಲ್ಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ಪ್ರಕಟಿಸಿದ್ದಾರೆ.
ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಐಎನ್‌ಡಿಐಎ ಬ್ಲಾಕ್‌ನ ಫ್ಲೋರ್ ಲೀಡರ್ ಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಐಎನ್‌ಡಿಐಎ ನಾಯಕರ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, “ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿ ನೇಮಿಸಲಾಗಿದೆ” ಎಂದು ಹೇಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
18 ನೇ ಲೋಕಸಭೆಯು ಹತ್ತು ವರ್ಷಗಳಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು (LoP) ಹೊಂದಿರುತ್ತದೆ. 99 ಸಂಸದರನ್ನು ಹೊಂದಿರುವ ಕಾಂಗ್ರೆಸ್ ಲೋಕಸಭೆಯಲ್ಲಿ ಅತಿ ದೊಡ್ಡ ವಿರೋಧ ಪಕ್ಷವಾಗಿದೆ.