ನಟ ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ “ರೋಜಿ’ ಚಿತ್ರೀಕರಣದಲ್ಲಿ ಬಿಝಿಯಾಗಿದೆ. ಈಗ ಈ ಚಿತ್ರಕ್ಕೆ ಮತ್ತೂಬ್ಬ ನಟನ ಎಂಟ್ರಿ ಯಾಗಿದೆ.
ತಮಿಳಿನ ವಿಜಯ್ ಅಭಿನಯದ “ಲಿಯೊ’ ಚಿತ್ರದಲ್ಲಿ ಚಾಕೊಲೇಟ್ ಕಾಫಿ ಎಂಬ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಸ್ಯಾಂಡಿ ಮಾಸ್ಟರ್ “ರೋಜಿ’ಯಲ್ಲಿ ನಟಿಸುತ್ತಿದ್ದಾರೆ. “ನಾನು ನೃತ್ಯ ನಿರ್ದೇಶಕನಾಗಿ ಹಲವು ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ಲಿಯೊ ಚಿತ್ರದ ನನ್ನ ಪಾತ್ರಕ್ಕೆ ಈಗ ಎಲ್ಲ ಕಡೆ ಮೆಚ್ಚುಗೆ ವ್ಯಕ್ತವಾಗಿದೆ.
ನಿರ್ದೇಶಕ ಶೂನ್ಯ ಅವರು, ಈ ಚಿತ್ರದ ಕಥೆ ಹಾಗೂ ನನ್ನ ಪಾತ್ರದ ಬಗ್ಗೆ ಹೇಳಿದರು. ಇಷ್ಟವಾಯಿತು. ಆಂಡಾಳ್ ಎಂಬುದು ನನ್ನ ಪಾತ್ರದ ಹೆಸರು’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಂಡರು ಸ್ಯಾಂಡಿ. ನಟ ಯೋಗಿ ಕೂಡಾ ಪಾತ್ರದ ಬಗ್ಗೆ ಮಾತನಾಡಿ ದರು. “ನನ್ನ ಪಾತ್ರದ ಹೆಸರು ರೋಜಿ. ನಮ್ಮ ಚಿತ್ರಕ್ಕೆ ಈಗಾಗಲೇ ಹದಿನೈದು ದಿನಗಳ ಕಾಲ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ವಿಭಿನ್ನವಾದ ಟೀಸರ್ ಸಹ ಬರಲಿದೆ’ ಎಂದರು.
ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಚಿತ್ರದಲ್ಲಿ ಕನ್ನಡದ ಹೆಸರಾಂತ ನಟರಿಬ್ಬರು ಹಾಗೂ ತೆಲುಗಿನ ಖ್ಯಾತ ನಟರೊಬ್ಬರು ನಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಆ ಕುರಿತು ಮಾಹಿತಿ ನೀಡುವುದಾಗಿ ಹೇಳಿದರು ನಿರ್ದೇಶಕ ಶೂನ್ಯ.