ಬೆಂಗಳೂರು: ಬಿಜೆಪಿ ಸೇರಲು ಅಧಿಕೃತ ಆಹ್ವಾನ ಬಂದ ಬಳಿಕ ಮಾ. 13ರಂದು ದೆಹಲಿಗೆ ತೆರಳಲು ತೀರ್ಮಾನಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮಾ. 16ರೊಳಗೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಎಸ್.ಎಂ.ಕೃಷ್ಣ ಅವರನ್ನು ಮಾ. 15 ಅಥವಾ 16ರಂದು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸೇರ್ಪಡೆ ಸಂಧಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.
ಆದರೆ, ಬಿಜೆಪಿ ಮೂಲಗಳ ಪ್ರಕಾರ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಎಸ್.ಎಂ.ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕವೇ ಸೇರ್ಪಡೆ ದಿನಾಂಕ ಅಂತಿಮಗೊಳ್ಳಲಿದೆ. ಬಹುತೇಕ ಅವರು ದೆಹಲಿಯಲ್ಲೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದರಲ್ಲೂ ಉತ್ತರ ಪ್ರದೇಶದ ಚುನಾವಣೆ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ. ಮಾ. 11ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿ ಬಿಜೆಪಿ ಏಕ ಪಕ್ಷವಾಗಿ ಅಧಿಕಾರಕ್ಕೆ ಬಂದರೆ ಮಾ. 15 ಅಥವಾ 16ರಂದೇ ಕೃಷ್ಣ ಅವರು ಬಿಜೆಪಿಗೆ ಸೇರಬಹುದು. ಇಲ್ಲವಾದರೆ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಮಧ್ಯೆ ಎಸ್.ಎಂ.ಕೃಷ್ಣ ಅವರನ್ನು ಶೀಘ್ರ ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ರಾಜ್ಯದ ಬಿಜೆಪಿ ನಾಯಕರು ವರಿಷ್ಠರನ್ನು ಒತ್ತಾಯಿಸುತ್ತಿದ್ದಾರೆ. ಬಜೆಟ್ ಅಧಿವೇಶನ ಮುಗಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸಲಾಗುತ್ತಿದ್ದು, ಅಷ್ಟರಲ್ಲಿ ಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆಯಾದರೆ ಹೆಚ್ಚು ಅನುಕೂಲವಾಗುತ್ತದೆ ಎಂಬುದು ರಾಜ್ಯ ನಾಯಕರ ಅಭಿಪ್ರಾಯ. ಈಗಾಗಲೇ ಈ ವಿಚಾರವನ್ನು ವರಿಷ್ಠರ ಗಮನಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಕುಮಾರ್ ಬಂಗಾರಪ್ಪ ಬಿಜೆಪಿಗೆ
*ಗುರುವಾರ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ, ಮಾಜಿ ಸಚಿವ ಕುಮಾರ ಬಂಗಾರಪ್ಪ ಮತ್ತು ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯ್ಕ ಅವರು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ.