ಭಾರತೀನಗರ(ಮಂಡ್ಯ): ನಿಷ್ಠಾವಂತರಿಗೆ ಜೆಡಿಎಸ್ ಯಾವತ್ತೂ ಅನ್ಯಾಯ ಮಾಡಿಲ್ಲ. ಹಾಗೆಯೇ ಪಕ್ಷಕ್ಕೆ ದ್ರೋಹ ಎಸಗಿದವರನ್ನು ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕೆಂದು ಭಾರತೀನಗರಕ್ಕೆ ಆಗಮಿಸಿದ್ದ ಅವರು, ವಿಧಾನಸಭಾ ಅಧಿವೇಶನದ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಭಿನ್ನಮತೀಯ ಶಾಸಕ ಚಲುವರಾಯಸ್ವಾಮಿ ನಡುವಿನ ಮಾತುಕತೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ¿, ಎಚ್.ಡಿ.ರೇವಣ್ಣ ಅವರೊಂದಿಗೆ ಕುಳಿತಿರುವ ಕುರಿತು ಗಾಳಿಸುದ್ದಿ ಹಬ್ಬಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ನಮ್ಮ ಪಕ್ಷ ಯಾವತ್ತೂ ಅನ್ಯಾಯ ಮಾಡಿಲ್ಲ. ಅದರಂತೆ ಪಕ್ಷಕ್ಕೆ ದ್ರೋಹ ಮಾಡಿದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.
ಚಲುವರಾಯಸ್ವಾಮಿ, ರೇವಣ್ಣ ಜತೆಗಿದ್ದರು ಎಂಬುದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.
ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಬಿಜೆಪಿ ಸೇರುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆಯೇ ಹೊರತು ಕೃಷ್ಣ ಅವರು ತಮ್ಮ ನಿಲುವನ್ನು ಬಹಿರಂಗಪಡಿಸಿಲ್ಲ. ಹಾಗಾಗಿ ಕೃಷ್ಣ ಅವರು ಬಿಜೆಪಿ ಸೇರುತ್ತಾರೆಂಬುದು ಕೇವಲ ವದಂತಿ ಅಷ್ಟೆ. ಅವರು ಬಿಜೆಪಿಗೆ ಹೋಗುತ್ತಾರೆ ಎನ್ನುವುದು ಅನುಮಾನ. ರಾಜ್ಯದ ಹಿತದೃಷ್ಟಿಯಿಂದ ಅವರು ಅಂತಹ ತಪ್ಪು ಮಾಡುವುದಿಲ್ಲ ಎಂದುಕೊಂಡಿದ್ದೇನೆ ಎಂದರು.
ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು ಜೆಡಿಎಸ್‌ಗೆ ಕರೆತಂದು ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸುವ ಆಲೋಚನೆಗಳು ಪಕ್ಷದಲ್ಲಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲೂ ಹೆಚ್ಚಿನ ಸಂಘಟನೆಗೆ ಒತ್ತು ನೀಡಿದ್ದು, ಆ ಭಾಗದಲ್ಲಿ 40ರಿಂದ 45 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸವಿದೆ ಎಂದರು.