ಮಡಿಕೇರಿ: ಎಂಡಿಎಂಎ ಎಂಬ ಹೆಸರಿನ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ನಿವಾಸಿ ಎಂ. ಎಚ್. ಸಯ್ಯದ್ ಹುಸೇನ್ (27) ಬಂಧಿತ ಆರೋಪಿ. ಆತನ ಬಳಿಯಿದ್ದ 3.06 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಗೆ ಸಾರ್ವಜನಿಕರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಸೈಬರ್ ಕ್ರೈಂ (ಸೆನ್) ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಕೆ.ರಾಘವೇಂದ್ರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.
ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಈ ತಂಡಕ್ಕೆ ಲಭಿಸಿತ್ತು. ಅದರಂತೆ ದಾಳಿ ನಡೆಸಲಾಗಿತ್ತು.