ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿ ಜೂ.12ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕೆ ತರುವಂತೆ 2 ವರ್ಷಗಳಿಂದ ಉತ್ತರ ಕರ್ನಾಟಕದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಪ್ರದರ್ಶಿಸುತ್ತಿವೆ. ಕೂಡಲೇ ಪ್ರಧಾನಿಯವರು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಆಗ್ರಹಿಸಿದರು.
ಬಯಲು ಸೀಮೆಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಲ್ಲಿನ ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಯೋಜನೆ ಜಾರಿ ಕುರಿತು ಇಂದಿಗೂ ಸ್ಪಷ್ಟ ನಿಲುವು ಮತ್ತು ಯೋಜನೆ ರೂಪಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೂ.6ರಂದು ಮೇಕೆದಾಟು ಯೋಜನೆ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ರಾಮನಗರ ಮೂಲಕ ಕನಕಪುರದವರೆಗೆ ಬೃಹತ್ ರ್ಯಾಲಿ ನಡೆಸಲಾಗುವುದು. ಜೂ.12ರಂದು ಕೇಂದ್ರ ಕಾರ್ಖಾನೆಗಳ ಖಾಸಗೀಕರಣ ವಿರೋಧಿಸಿ ಮತ್ತು ಮಹದಾಯಿ ಯೋಜನೆಗೆ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಕನ್ನಡ ಪರ ಸಂಘಟನೆಗಳೊಂದಿಗೆ ರ್ಯಾಲಿ ನಡೆಸುವುದಾಗಿ ಹೇಳಿದರು.
ಕೇರಳ ಸರ್ಕಾರ ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ಮಲೆಯಾಳಂ ಭಾಷೆ ಏರಿಕೆಗೆ ಯತ್ನಿಸುತ್ತಿದೆ. ಇದನ್ನು ಖಂಡಿಸಿ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಮಟ್ಟಹಾಕಲು ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ಹಮ್ಮಿಕೊಂಡಿವೆ ಎಂದ ಅವರು, ಬೆಳಗಾವಿಯ ಕನ್ನಡಿಗ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೂಡಲೇ ಬೆಳಗಾವಿ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು. ಎಂಇಎಸ್ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಅಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.