ಬೆಂಗಳೂರು: ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ದೊರಕಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯೋಜನೆಗೆ ಒಪ್ಪಿಗೆ ನೀಡಿದ್ದು, ಹಲವು ವರ್ಷಗಳ ಬೇಡಿಕೆ ಈಡೇರಿದೆ. ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಿ ತ್ವರಿತವಾಗಿ ಕೆಲಸ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಡಾಲರ್ ಕಾಲೋನಿ ನಿವಾಸದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬಹುಕಾಲದ ಹೋರಾಟಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸಕ್ತಿ ವಹಿಸಿ ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ರಾಜ್ಯಕ್ಕೆ 13.5 ಟಿಎಂಸಿ ನೀರು ದೊರೆಯಲಿದ್ದು, ಹುಬ್ಬಳ್ಳಿ- ಧಾರವಾಡ ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ನೀರಾವರಿಗೂ ಅನುಕೂಲವಾಗಲಿವೆ ಎಂದು ತಿಳಿಸಿದರು.
ಮಹದಾಯಿ ಯೋಜನೆಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು. ಆದಷ್ಟು ಶೀಘ್ರವಾಗಿ ಕೆಲಸ ಪ್ರಾರಂಭಿಸಲು ಕ್ರಮ ಕೈಗೊಳ್ಳುವುದಾಗಿ ನಾನು ಭರವಸೆ ನೀಡುತ್ತೇನೆ ಎಂದ ಹೇಳಿದರು.
ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಅಕ್ರಮವಾಗಿ ನೀರು ಹರಿಸಲಾಗುತ್ತಿದೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಅದೆಲ್ಲಾ ಸತ್ಯಕ್ಕೆ ದೂರವಾದುದು ಎಂದಷ್ಟೇ ತಿಳಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾತನಾಡಿ, ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಹೊರಬಿದ್ದ ವಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯದಲ್ಲೂ ನಾವು ಅತ್ಯುತ್ತಮವಾಗಿ ವಾದ ಮಂಡಿಸಿದ್ದೆವು. ರಾಜ್ಯ ಸರ್ಕಾರ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ಜಲಸಂಪನ್ಮೂಲ ಸಚಿವರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.
400 ಕೋಟಿ ರೂ. ಅನುದಾನಕ್ಕೆ ಮನವಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ. ಹಾಗೆಯೇ ಮಹದಾಯಿ ಯೋಜನೆಗೆ ಮುಂದಿನ ಬಜೆಟ್‌ನಲ್ಲಿ 400 ಕೋಟಿ ರೂ. ಮೀಸಲಿಟ್ಟು, ಕಾಮಗಾರಿ ಆರಂಭಿಸುವಂತೆ ಕೋರಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.